ಮಡಿಕೇರಿ, ಜೂ. ೨೯: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆಗಳನ್ನು ದಾಖಲಿಸಲಾಗುತ್ತಿದೆ ಎಂದು ಆಕ್ಷೇಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಎದುರು ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಏಜೆಂಟ್ರAತೆ ವರ್ತಿಸುತ್ತಿದ್ದು, ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆಗಳನ್ನು ದಾಖಲಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ತಮಗೆ ಬಂದ ಸಂದೇಶಗಳನ್ನು (ಮೆಸೇಜ್) ಫಾರ್ವಡ್ ಮಾಡಿದ್ದರೆ, ಅವರ ಮೇಲೆ ಮೊಕದ್ದಮೆ ಹೂಡಿ ಮೊಬೈಲ್ಗಳನ್ನು ವಶಪಡಿಸಿಕೊಂಡು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್ಸಿಗರೊಬ್ಬರು ಬಿಜೆಪಿ ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರನ್ನು ಗುರಿ ಮಾಡಿ ಹೀನಾಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು, ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಈ ಬಗ್ಗೆ ಕೊಡಗು ಜಿಲ್ಲೆಯ ಬಿಜೆಪಿ ನಾಯಕರು ಒಂದು ವಾರದ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಖುದ್ದು ದೂರು ನೀಡಿದ್ದರೂ ಯಾವುದೇ ಕಾನೂನು ಕ್ರಮ ಇಲ್ಲಿಯವರೆಗೆ ಕೈಗೊಂಡಿರುವುದಿಲ್ಲ. ಇದರಿಂದ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿರುವುದು ಕಂಡು ಬರುತ್ತಿದೆ. ಇದನ್ನು ಪ್ರಶ್ನಿಸಿ ಜಿಲ್ಲಾ ಬಿಜೆಪಿಯು ಜು. ೩ ರಂದು ಬೆಳಿಗ್ಗೆ ೧೦.೩೦ ಕ್ಕೆ ಕೊಡಗಿನ ಎಲ್ಲಾ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಿದೆ ಎಂದು ಜಿಲ್ಲಾ ಬಿಜೆಪಿಯ ವಕ್ತಾರ ಬಿ.ಕೆ. ಅರುಣ್ಕುಮಾರ್ ತಿಳಿಸಿದ್ದಾರೆ.