ಮಡಿಕೇರಿ, ಜೂ. ೨೯: : ಸಂಘರ್ಷ ಸೃಷ್ಟಿಸುವ ರಾಜಕೀಯ ಸಂದೇಶಗಳನ್ನು ಹರಿಬಿಟ್ಟ ಆರೋಪದಡಿ ಕಾಂಗ್ರೆಸ್ ಪಕ್ಷದ ತೆನ್ನೀರ ಮೈನ ವಿರುದ್ಧ ದೂರು ನೀಡಿದರೂ, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಮಡಿಕೇರಿ ನಗರ ಬಿಜೆಪಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ಇಲ್ಲದಿದ್ದಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಇಲ್ಲಸಲ್ಲದ ಸಂದೇಶ ಹಂಚಿಕೊಳ್ಳುವ ಮೂಲಕ ಮೈನ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ. ಈ ಸಂಬAಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದರೂ ಇದುವರೆಗೂ ಪ್ರಕರಣ ದಾಖಲಿಸಿಕೊಂಡಿಲ್ಲ. ಜುಲೈ ೧ ರೊಳಗೆ ಸೂಕ್ತ ಕ್ರಮಕ್ಕೆ ಮುಂದಾಗದಿದ್ದಲ್ಲಿ ಜಿಲ್ಲೆ ವ್ಯಾಪಿ ಎಲ್ಲಾ ಪೊಲೀಸ್ ಠಾಣೆ ಎದುರು ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.
ಮೈನ ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡುತ್ತಿದ್ದಾರೆ. ಇದರಿಂದ ಅಶಾಂತಿ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಿದ್ದರೂ ಪೊಲೀಸರು ಯಾವುದೇ ಕ್ರಮಕೈಗೊಳ್ಳದಿರುವುದು ಅನುಮಾನ ಮೂಡಿಸಿದೆ. ಇವರ ವಿರುದ್ಧ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮವಹಿಸಬೇಕೆಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ. ಜಗದೀಶ್, ಕವನ್ ಕಾವೇರಪ್ಪ, ನಗರ ಯುವ ಮೋರ್ಚಾ ಅಧ್ಯಕ್ಷ ಪಾಂಡೀರ ಪೂಣಚ್ಚ, ಓಬಿಸಿ ಮೋರ್ಚಾ ಅಧ್ಯಕ್ಷ ಪಿ.ಜಿ. ಗಜೇಂದ್ರ, ಮಹಿಳಾ ಮೋರ್ಚಾ ಅಧ್ಯಕ್ಷೆ ಸೌಮ್ಯ ಹಾಜರಿದ್ದರು.