ಕೂಡಿಗೆ, ಜು. ೧: ಹೆಬ್ಬಾಲೆ ಮತ್ತು ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಹಾಡಿಗಳಿಗೆ ಅಧಿಕಾರಿಗಳೊಂದಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ಗೌಡ ಭೇಟಿ ನೀಡಿ ಹಾಡಿಯ ಜನರ ಸಮಸ್ಯೆಗಳನ್ನು ಆಲಿಸಿದರು.
ಚಿನ್ನೇನಹಳ್ಳಿ ಹಾಡಿಗೆ ಶಾಸಕರು ಭೇಟಿ ನೀಡಿದ ಸಂದರ್ಭ ಹಾಡಿಯ ಗ್ರಾಮಸ್ಥರು, ಅಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ, ಮನೆಗಳ ನಿರ್ಮಾಣ, ಚರಂಡಿ ದುರಸ್ತಿ, ಸಮುದಾಯದ ಭವನದ ದುರಸ್ತಿ, ಹಾಡಿಗಳಿಗೆ ಇಲಾಖೆಯ ವತಿಯಿಂದ ನೀಡಲಾಗುವ ಆಹಾರ ಕಿಟ್ನಲ್ಲಿ ವ್ಯತ್ಯಾಸಗಳು ಕಂಡುಬರುತ್ತಿರುವ ಬಗ್ಗೆ ಕಾಡಾನೆಗಳ ಹಾವಳಿ, ವಿದ್ಯುತ್ ಸಂಪರ್ಕ ಕಲ್ಪಿಸದೆ ಇರುವ ಬಗ್ಗೆ ಶಾಸಕರ ಗಮನ ಸೆಳೆದರು. ಶಾಸಕರು ಹಾಡಿಯ ಎಲ್ಲಾ ಭಾಗಗಳಿಗೆ ಭೇಟಿ ನೀಡಿ ಮನೆಗಳ ಪರಿಶೀಲನೆ ನಡೆಸಿ, ಹಾಡಿಯ ಗ್ರಾಮಸ್ಥರ ಸಮಸ್ಯೆಗಳನ್ನು ಕೂಲಂಕಷವಾಗಿ ತಿಳಿದುಕೊಂಡು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿಯನ್ನು ಪಡೆದರು.
ವಿವಿಧ ಇಲಾಖೆಯ ಅಧಿಕಾರಿಗಳಿಗೆ ಮತ್ತು ಹೆಬ್ಬಾಲೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಇಲಾಖೆಯ ವತಿಯಿಂದ ಕೈಗೊಳ್ಳಬಹುದಾದ ಕಾಮಗಾರಿಗಳನ್ನು ಅತಿ ಶೀಘ್ರವಾಗಿ ಕೈಗೊಂಡು, ಮೂಲಭೂತ ಸೌಕರ್ಯಗಳನ್ನು ನಿಯಮಾನುಸಾರ ಕ್ರಮಬದ್ಧವಾಗಿ ಒದಗಿಸುವಂತೆ ಮಂತರ್ ಸೂಚನೆ ನೀಡಿದರು. ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ದಿಡ್ಡಳ್ಳಿ ಪುನರ್ವಸತಿ ಕೇಂದ್ರ, ಹುಣಸೇಪಾರೆ, ಭುವನಗರಿ ಗ್ರಾಮಗಳ ಹಾಡಿಗೆ ಭೇಟಿ ನೀಡಿ ಅಲ್ಲಿನ ಗ್ರಾಮಸ್ಥರ ಸಮಸ್ಯೆಗಳನ್ನು ಶಾಸಕ ಡಾ. ಮಂತರ್ ಗೌಡ ಆಲಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ನಗರ ಪ್ರಾಧಿಕಾರದ ಅಧ್ಯಕ್ಷ, ಪ್ರಮೋದ್ ಮುತ್ತಪ್ಪ, ರಾಜ್ಯ ಕೆಪಿಸಿಸಿ ಸಂಯೋಜಕ ನಟೇಶ್ ಗೌಡ, ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ವೀರೇಂದ್ರ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಸಿದ್ದೇಗೌಡ, ಹೆಬ್ಬಾಲೆ ಉಪ ವಲಯ ಅರಣ್ಯ ಅಧಿಕಾರಿ ಭರತ್, ಕುಶಾಲನಗರ ತಾಲೂಕು ಆಹಾರ ನಿರೀಕ್ಷಣಾಧಿಕಾರಿ ಎಂ.ಎಸ್. ಸ್ವಾತಿ, ವಿದ್ಯುತ್ ಇಲಾಖೆಯ ಇಂಜಿನಿಯರ್ ರಾಣಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾದಪ್ಪ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಪಿ. ಹಮೀದ್, ಅನಂತ್, ಬಸವನಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಅರುಣ್ರಾವ್, ಜಿಲ್ಲಾ ಐಎನ್ಟಿಸಿ ಘಟಕದ ಅಧ್ಯಕ್ಷ ಅಣ್ಣಯ್ಯ, ತೊರೆನೂರು ಸಹಕಾರ ಸಂಘದ ನಿರ್ದೇಶಕ ಕೃಷ್ಣಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಹಾಡಿಯ ಮುಖ್ಯಸ್ಥರು ಹಾಜರಿದ್ದರು.