*ಗೋಣಿಕೊಪ್ಪ, ಜು. ೧ : ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯ, ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ ಅನುಕರಣೀಯ ಎಂದು ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಪ್ರಶಂಸೆ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಕಚೇರಿ, ಉದ್ಯಾನ ಮತ್ತು ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಮಾತನಾಡಿದರು. ಇಲ್ಲಿನ ಚಟುವಟಿಕೆ ಬೇರೆ ಗ್ರಾಮ ಪಂಚಾಯಿತಿಗಳಿಗೂ ಮಾದರಿಯಾಗಲಿದೆ. ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಟಾನಕ್ಕೆ ತರಲು ಶ್ರಮಿಸುವುದಾಗಿ ಹೇಳಿದರು.

ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಉದ್ಯಾನ ಅನುಷ್ಠಾನಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಘನತ್ಯಾಜ್ಯ ನಿರ್ವಹಣೆ ಬಗ್ಗೆ ಕ್ಲೀನ್ ಕೂರ್ಗ್ ಇನಿಷಿಯೇಟಿವ್ ಸಂಸ್ಥೆಯ ಪದಾಧಿಕಾರಿಗಳಾದ ಸವಿತಾ, ಅಪರ್ಣ, ಸುನೀತಾ, ನಿತಿ ಮಾಹಿತಿ ಹಂಚಿಕೊAಡರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಆಲೀರ ರಶೀದ್, ಸದಸ್ಯರು ಮತ್ತು ಕ್ಲೀನ್ ಕೂರ್ಗ್ ಇನಿಷಿಯೇಟಿವ್ ಕಾರ್ಯಕರ್ತರು ಇದ್ದರು.