ಶನಿವಾರಸಂತೆ, ಜು. ೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಮವಾರಪೇಟೆ ವತಿಯಿಂದ ಕೊಡ್ಲಿಪೇಟೆ ವಲಯದ ಕಿತ್ತೂರು ಕಾರ್ಯಕ್ಷೇತ್ರದಲ್ಲಿ ಪರಿಸರ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಹಂಡ್ಲಿ ಗ್ರಾ.ಪಂ. ಅಧ್ಯಕ್ಷೆ ಸುಧಾ ಈರೇಶ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಪ್ರತಿಯೊಬ್ಬರು ಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಸಮೃದ್ದಿಗೊಳಿಸಬೇಕಿದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಜೊತೆಗೆ ಪರಿಸರ ಉಳಿವಿಗಾಗಿ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನಿಯ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ನಾಗರಾಜು ಕಾರ್ಯಕ್ರಮದ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಕಿತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಖಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಿತ್ತೂರು ಒಕ್ಕೂಟದ ಅಧ್ಯಕ್ಷ ನಟರಾಜ್, ಶಾಲಾ ಎಸ್ಡಿಎಂಸಿ ಸದಸ್ಯೆ ಸೌಮ್ಯ, ಸಹ ಶಿಕ್ಷಕಿ ವಿಶಾಲಾಕ್ಷಿ, ಸೇವಾ ಪ್ರತಿನಿಧಿ ಭಾಗ್ಯ, ಅಂಗನವಾಡಿ ಕಾರ್ಯಕರ್ತೆ ಗಿರಿಜಾ, ಪ್ರಮುಖರಾದ ಪ್ರಸಾದ್, ಮುಂತಾದವರು ಹಾಜರಿದ್ದರು. ಈ ಸಂದರ್ಭದಲ್ಲಿ ಪರಿಸರ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪರಿಸರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಶಾಲೆಗೆ ಸೇರಿದ ಜಾಗದಲ್ಲಿ ಗಿಡಗಳನ್ನು ನೆಡಲಾಯಿತು.