ಕುಶಾಲನಗರ, ಜು. ೩: ಕುಶಾಲನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕುಟ್ಟಂಡ ಪ್ರಮೋದ್ ಮುತ್ತಪ್ಪ, ಸದಸ್ಯರಾಗಿ ವಿ.ಎಸ್. ಸಜಿ, ಕೆ.ಆರ್. ಸಂಗೀತ, ಕೆ.ಆರ್. ಕಿರಣ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡರು.

ಕುಶಾಲನಗರದ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಪ್ರಾಧಿಕಾರದ ಕಛೇರಿಯಲ್ಲಿ ಹೋಮ, ಪೂಜಾ ಕಾರ್ಯಕ್ರಮ ನೆರವೇರಿಸಿದ ಬಳಿಕ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ ಮಾಡಿದರು.

ನಂತರ ನಡೆದ ಸಭಾ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರ ಕೆಲಸ ಕಾರ್ಯಗಳು ಕಾನೂನಿನ ಚೌಕಟ್ಟಿನಲ್ಲಿ ನಡೆಯುವಂತಾಗಬೇಕಿದೆ. ಜನಸೇವೆಗೆ ನೂತನ ಪದಾಧಿಕಾರಿಗಳು ಹಾಗೂ ಅಧಿಕಾರಿ ವರ್ಗದವರು ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ.

ಅಧಿಕಾರದ ದರ್ಪ ತೋರದೆ ಕಛೇರಿಗೆ ಬರುವವರನ್ನು ಸೌಜನ್ಯದಿಂದ ರಾಜಕೀಯ ರಹಿತವಾಗಿ ಸೇವಾ ಮನೋಭಾವದೊಂದಿಗೆ ಸ್ಪಂದಿಸಿ ಕುಶಾಲನಗರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮವಹಿಸಬೇಕಿದೆ ಎಂದು ಕರೆ ನೀಡಿದರು.

(ಮೊದಲ ಪುಟದಿಂದ) ಕೊಡಗು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಕೊಡಗಿನ ವಾಣಿಜ್ಯ ನಗರಿ ಕುಶಾಲನಗರ ವೇಗವಾಗಿ ಬೆಳೆಯುತ್ತಿದೆ. ಹಲವು ಪ್ರಮುಖ ಯೋಜನೆಗಳು ಇಲ್ಲಿ ಅನುಷ್ಠಾನಗೊಳ್ಳುತ್ತಿದ್ದು ಇದನ್ನು ಸುಸೂತ್ರವಾಗಿ ನಿರ್ವಹಿಸಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಪ್ರಾಧಿಕಾರದ ಕಾರ್ಯಯೋಜನೆ ಆಗಬೇಕು. ಕುಶಾಲನಗರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಅವಕಾಶವನ್ನು ನೂತನ ಪದಾಧಿಕಾರಿಗಳು ಎಲ್ಲರ ಸಹಕಾರದ ಮೂಲಕ ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡಿದರು.

ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡೂರಾವ್ ಮಾತನಾಡಿ, ನೂತನ ಪದಾಧಿಕಾರಿಗಳ ಅವಧಿಯಲ್ಲಿ ಕುಶಾಲನಗರದ ಐತಿಹಾಸಿಕ ಕೆರೆಗಳು ಅಭಿವೃದ್ಧಿ ಹೊಂದಬೇಕಿದೆ ಎಂಬ ಆಶಯ ವ್ಯಕ್ತಪಡಿಸಿದರು.

ತಾವರೆಕೆರೆಯನ್ನು ಉತ್ತಮ ಪ್ರವಾಸಿ ತಾಣವಾಗಿಸುವ ಯೋಜನೆ ಮತ್ತೆ ಸಾಕಾರಗೊಳ್ಳಬೇಕು ಎಂದರು.

ಗ್ಯಾರAಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಊರಿನ ಆಸ್ತಿಗಳನ್ನು ಉಳಿಸುವಲ್ಲಿ ಪ್ರಾಧಿಕಾರದ ಪದಾಧಿಕಾರಿಗಳು ದುಡಿಯಬೇಕು. ಎಲ್ಲರಿಗೂ ಮಾದರಿಯಾಗಿ ಕಾರ್ಯನಿರ್ವಹಿಸಬೇಕು. ಪಕ್ಷಕ್ಕಾಗಿ ದುಡಿಯುವವರಿಗೆ ಅಧಿಕಾರ, ಸ್ಥಾನಮಾನ ಒಲಿದುಬರಲಿದೆ. ನೂತನ ಶಾಸಕರ ಪ್ರಯತ್ನದಿಂದ ಕುಶಾಲನಗರಕ್ಕೆ ಮತ್ತಷ್ಟು ಹೊಸ ಯೋಜನೆಗಳು ಜಾರಿಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮಾಜಿ ಕೆ.ಪಿ. ಚಂದ್ರಕಲಾ ಮಾತನಾಡಿ, ಸ್ವಾರ್ಥ ರಹಿತವಾಗಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಪ್ರಾಧಿಕಾರ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು.

ಅಧಿಕಾರ ವಹಿಸಿಕೊಂಡ ನೂತನ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿ, ಸ್ಥಾನಮಾನಗಳಿಗೆ ಪೈಪೋಟಿ ಸಾಮಾನ್ಯ. ದೊರೆತ ಅಧಿಕಾರವನ್ನು ಜನಸಾಮಾನ್ಯರ ಸೇವೆಗಾಗಿ ನೂತನ ಪದಾಧಿಕಾರಿಗಳ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.

ಈ ಸಂದರ್ಭ ಕುಶಾಲನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ. ಚರಣ್, ತಹಶೀಲ್ದಾರ್ ಕಿರಣ್ ಗೌರಯ್ಯ, ಪುರಸಭಾ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸ್ವಾತಿ ಸೇರಿದಂತೆ ಪುರಸಭಾ ಸದಸ್ಯರುಗಳು, ಕಾಂಗ್ರೆಸ್ ವಿವಿಧ ಘಟಕಗಳ ಪ್ರಮುಖರು ಇದ್ದರು.