*ಗೋಣಿಕೊಪ್ಪ, ಜು. ೩: ಬುಡಕಟ್ಟು ಜನಾಂಗದ ಕುಟುಂಬಗಳಿಗೆ ನಿವೇಶನ ಕ್ಕಾಗಿ ಆಗ್ರಹಿಸಿ ಬುಡಕಟ್ಟು ಕಾರ್ಮಿಕರ ಸಂಘ, ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ವತಿಯಿಂದ ಹೊಸೂರು ಗ್ರಾಮ ಪಂಚಾಯಿತಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯಿತು.
ಲೈನ್ಮನೆಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಕುಟುಂಬಗಳಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಸತ್ಯಾಗ್ರಹ ಆರಂಭಿಸಲಾಯಿತು. ಮಳೆಯ ನಡುವೆ ಚಿಕ್ಕ ಮಕ್ಕಳನ್ನು ಎತ್ತಿಕೊಂಡು ಮಹಿಳೆಯರು, ಪುರುಷರು ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡು ಆಗ್ರಹಿಸಿದರು. ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡುವಿನಲ್ಲಿ ನಿವೇಶನ ರಹಿತರಿಗೆ ವಿತರಿಸಲು ಭೂಮಿ ಲಭ್ಯವಿದ್ದು, ಈ ಭೂಮಿಯನ್ನು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲೈನ್ಮನೆಯಲ್ಲಿ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳವರಿಗೆ ನೀಡಬೇಕೆಂದು ಆಗ್ರಹಿಸಿದರು.
ಬುಡಕಟ್ಟು ಕಾರ್ಮಿಕರ ಸಂಘದ ಅಧ್ಯಕ್ಷ ಗಪ್ಪು ಮಾತನಾಡಿ, ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಕುಟುಂಬಗಳಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕಳೆದ ಒಂಬತ್ತು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಾ ಬಂದಿದ್ದರೂ, ಕೇವಲ ಆಶ್ವಾಸನೆ ನೀಡುತ್ತಾ ಬಂದಿರುವ ಅಧಿಕಾರಿಗಳು ನಮ್ಮ ಬೇಡಿಕೆ ಈಡೇರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಿವೇಶನದ ಬೇಡಿಕೆ ಈಡೇರುವವರೆಗೂ ನಿರಂತರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಸಂಘಟನೆಯ ಪ್ರಮುಖರಾದ ಭವ್ಯ ಮಾತನಾಡಿ, ಬುಡಕಟ್ಟು ಕುಟುಂಬಗಳಿಗೆ ನಿವೇಶನಕ್ಕಾಗಿ ಆಗ್ರಹಿಸಿ ಪೊನ್ನಂಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಕಚೇರಿ ಎದುರು ಈ ಹಿಂದೆ ಎಂಟು ತಿಂಗಳ ಕಾಲ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸಿದ ಸಂದರ್ಭ ಅಧಿಕಾರಿಗಳು ನಿವೇಶನ ಒದಗಿಸುವ ಭರವಸೆ ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದರು.
ಪೊನ್ನಂಪೇಟೆ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದ ಕಾಫಿ ತೋಟಗಳ ಲೈನ್ ಮನೆಯಲ್ಲಿ ಹಾಗೂ ಬಾಡಿಗೆ ನಿವೇಶನದಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳಿಗೆ ನಿವೇಶನದ ಹಕ್ಕು ಪತ್ರ ಹಾಗೂ ವಸತಿಗಾಗಿ ಬೇಡಿಕೆ ಈಡೇರುವವರೆಗೂ ನಿರಂತರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.