ಮಡಿಕೇರಿ ಜು. ೯ : ಜನ್ಮ ದಿನದ ಪ್ರಯುಕ್ತ ಲೋಕ ಕಲ್ಯಾಣಕ್ಕಾಗಿ ಕುಟುಂಬ ಸದಸ್ಯರ ಜತೆಗೂಡಿ ತಾಯಿ ಕಾವೇರಿಮಾತೆ ಹಾಗೂ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು.

ತಮ್ಮ ೫೦ನೇ ಹುಟ್ಟು ಹಬ್ಬದ ಪ್ರಯುಕ್ತ ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿ ಹಾಗೂ ಪವಿತ್ರ ಕ್ಷೇತ್ರ ಶ್ರೀಭಗಂಡೇಶ್ವರ ದೇವಾಲಯಕ್ಕೆ ಕುಟುಂಬ ಸಹಿತ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು; ನಾಡಿನಲ್ಲಿ ಉತ್ತಮ ಮಳೆ ಆಗುತ್ತಿದ್ದು, ಎಲ್ಲರಲ್ಲಿ ಸಂತಸ, ಸಮೃದ್ಧಿ ತರುವಂತಾಗಲಿ ಎಂದು ಪ್ರಾರ್ಥಿಸಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದ ಮನೆ, ರಸ್ತೆ, ಸೇತುವೆ ಹಾನಿ ಬಗ್ಗೆ ಮುಖ್ಯಮಂತ್ರಿ ಅವರು, ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಲ್ಲಿ ಗಮನ ಸೆಳೆಯಲಾಗಿದ್ದು, ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದೆ.

ಕಾಡಾನೆ ಮತ್ತು ಮಾನವ ಸಂಘರ್ಷ ತಪ್ಪಿಸುವಲ್ಲಿ ಹಲವು ಕಾರ್ಯಕ್ರಮ ರೂಪಿಸಲಾಗಿದೆ. ಆ ನಿಟ್ಟಿನಲ್ಲಿ ರೈಲ್ವೆ ಬ್ಯಾರಿಕೇಡ್‌ಗಳ ನಿರ್ಮಾಣ ಮಾಡಲಾಗುವುದು. ರ‍್ಯಾಪಿಡ್ ರೆಸ್ಪಾನ್ಸ್ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು. ಈ ಸಂಬAಧ ಅರಣ್ಯ ಸಚಿವರ ಜತೆಗೂ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಭಾಗಮಂಡಲ ಬಳಿಯ ಚೇರಂಬಾಣೆ ವ್ಯಾಪ್ತಿಯಲ್ಲಿನ ಸೇತುವೆ ಸರಿಪಡಿಸಲಾಗುವುದು, ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯನ್ನು ಹೆಚ್ಚಿಸುವಲ್ಲಿ ೬೬/೧೧ ಸಾಮರ್ಥ್ಯದ ೭ ವಿದ್ಯುತ್ ಉಪ ಘಟಕ ನಿರ್ಮಾಣ ಮಾಡಲು ಮುಂದಾಗಲಾಗಿತ್ತು, ಆದರೆ ಭವಿಷ್ಯದಲ್ಲಿ ಮತ್ತಷ್ಟು ವಿದ್ಯುತ್ ಬೇಡಿಕೆ ಹೆಚ್ಚಾಗುವುದರಿಂದ ಹೆಚ್ಚಿನ ಸಾಮರ್ಥ್ಯದ ವಿದ್ಯುತ್ ಉಪಘಟಕ ನಿರ್ಮಾಣ ಮಾಡಲಾಗುವುದು, ಆ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹು ಗ್ರಾಮ ಯೋಜನೆಯಡಿ ಗ್ರಾಮೀಣ ಪ್ರದೇಶದಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಲಾಗಿದೆ. ಈ ಸಂಬAಧ ಡಿಪಿಆರ್ ಸಿದ್ಧವಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಎಲ್ಲಾ ರೀತಿಯ

(ಮೊದಲ ಪುಟದಿಂದ) ಪ್ರಯತ್ನ ಮಾಡಲಾಗುವುದು, ಆದ್ಯತೆ ಮೇಲೆ ಯೋಜನೆ ರೂಪಿಸಲಾಗುವುದು.

ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ವಿವಿಧ ಕಾರ್ಯಕ್ರಮ ಆಯೋಜಿಸಿದ್ದಾರೆ. ಆ ನಿಟ್ಟಿನಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೫೯ ಗ್ರಾ.ಪಂ.ಗಳಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗೆಯೇ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ, ಗೋಣಿಕೊಪ್ಪದ ಕೀರೆಹೊಳೆ ಬದಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಪೂಜೆ-ತುಲಾಭಾರ ಸೇವೆ

ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಬಳಿಕ ಮಹಾಗಣಪತಿ ದೇವಾಲಯದಲ್ಲಿ ಪೂಜೆ, ನಂತರ ಶ್ರೀ ಭಗಂಡೇಶ್ವರ ದೇವಾಲಯದ ಆವರಣದಲ್ಲಿ ವಿಶೇಷ ಪ್ರಾರ್ಥನೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಶ್ರೀ ಮಹಾವಿಷ್ಣು ದೇವರಲ್ಲಿ ಪೂಜೆ ಸಲ್ಲಿಸಿದ ನಂತರ ಸುಬ್ರಹ್ಮಣ್ಯ ದೇವರಲ್ಲಿ ಪ್ರಾರ್ಥಿಸಿ ಕಲ್ಲುಸಕ್ಕರೆಯ ತುಲಾಭಾರ ಸೇವೆ ನೆರವೇರಿಸಿದರು.

ವಿದ್ಯಾರ್ಥಿಗಳ ಜೊತೆ ಹುಟ್ಟು ಹಬ್ಬ್ಣ

ಬಳಿಕ ಭಾಗಮಂಡಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ಅಲ್ಲಿನ ವಿದ್ಯಾರ್ಥಿಗಳ ಜೊತೆಗೂಡಿ ಕೇಕ್ ವಿತರಿಸುವ ಮೂಲಕ ಜನ್ಮ ದಿನ ಆಚರಿಸಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಮಕ್ಕಳಿಗೆ ಪೆನ್ನು, ಪೆನ್ಸಿಲ್ ನೀಡುವ ಮೂಲಕ ಹುಟ್ಟುಹಬ್ಬ ಆಚರಣೆ ಗಮನ ಸೆಳೆಯಿತು. ಮಕ್ಕಳು ಈ ಸಂದರ್ಭದಲ್ಲಿ ಉಲ್ಲಾಸದಿಂದ ಸಂಭ್ರಮಿಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು; ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ವಿದ್ಯಾಭ್ಯಾಸ ಮುಂದುವರೆಸಬೇಕು. ಈ ಭಾಗದಲ್ಲಿ ಹಲವು ಸವಾಲುಗಳ ನಡುವೆ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಪ್ರಕೃತಿಯ ಮಡಿಲಲ್ಲಿ ಇರುವ ತಾವು ಪರಿಸರ ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಬೇಕು. ಸುಂದರ ಕೊಡಗು ಉಳಿಯಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸ್ವಚ್ಛತಾ ಅಭಿಯಾನಕ್ಕೆ ಚಾಲನೆ : ಬಳಿಕ ಭಾಗಮಂಡಲದ ಮಾರುಕಟ್ಟೆ ಆವರಣದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಗಮನ ಸೆಳೆದರು. ಅಲ್ಲಿನ ಅಂಗಡಿಗೆ ತೆರಳಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.

ಅರ್ಚಕರಾದ ಹರೀಶ್ ಭಟ್ ವಿಶೇಷ ಪೂಜೆ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಅಪ್ಪಾಜಿ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ದೇವಾಲಯ ಸಮಿತಿ ಮಾಜಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ದೇವಂಗೋಡಿ ಹರ್ಷ ಇಸ್ಮಾಯಿಲ್, ಬೇಕಲ್ ರಮನಾಥ್, ನೆರವಂಡ ಉಮೇಶ್ ಲವಚಿಣ್ಣಪ್ಪ. ಕೋಳಿಬೈಲು ವೆಂಕಟೇಶ್, ಸುನಿಲ್ ಪತ್ರವೋ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಪ್ರಾಂಶುಪಾಲ ಲೋಕೇಶ್, ಎಸ್‌ಡಿಎಂಸಿ ಅಧ್ಯಕ್ಷ ಉಸ್ಮಾನ್, ಹೊಸೂರು ಸೂರಜ್ ಇತರರು ಇದ್ದರು.