ಸೋಮವಾರಪೇಟೆ, ಜು. ೧೦: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾನಗಲ್ಲು ಗ್ರಾಮದಲ್ಲಿರುವ ಚರಂಡಿಗಳು ಕೊಳಚೆ ನೀರು ಸಂಗ್ರಹಣಾ ತೊಟ್ಟಿಗಳಾಗಿ ಮಾರ್ಪಟ್ಟಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದ್ದರೂ ಸಂಬAಧಿಸಿದ ಗ್ರಾ.ಪಂ. ಮೌನ ವಹಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.

ಹಾನಗಲ್ಲು ಗ್ರಾಮದ ಜಗದೀಶ್ ಎಂಬವರ ಮನೆಯ ಸಮೀಪದ ಚರಂಡಿಯಲ್ಲಿ ಕೊಳಚೆ ನೀರು ಸಂಗ್ರಹವಾಗಿದೆ. ನೀರಿನ ಸರಾಗ ಹರಿವಿಗೆ ಪಂಚಾಯಿತಿ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ವಾಸದ ಮನೆಗಳ ಸಮೀಪವೆ ಕೊಳಚೆ ನೀರು ಸಂಗ್ರಹವಾಗುತ್ತಿದೆ.

ಇAತಹ ಕೊಳಚೆಯಲ್ಲಿ ಸೊಳ್ಳೆ, ನೊಣ, ಹುಳ ಹುಪ್ಪಟೆಗಳು ಸೇರಿದಂತೆ ಇನ್ನಿತರ ಕ್ರಿಮಿಕೀಟಗಳು ಉತ್ಪತ್ತಿಯಾಗುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಹೀಗಿದ್ದರೂ ಸಹ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಆರೋಗ್ಯ ಮತ್ತು ನೈರ್ಮಲ್ಯ ಇಲಾಖೆಯವರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳೇ ಸಂಬAಧಿಸಿದ ಗ್ರಾ.ಪಂ. ಹಾಗೂ ಆರೋಗ್ಯ ಇಲಾಖೆಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೂ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿಗಳ ಶುಚಿತ್ವಕ್ಕೆ ಎಳ್ಳಷ್ಟೂ ಗಮನ ಹರಿಸಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ.