ಮುಳ್ಳೂರು, ಜು. ೨೦: ಸಮೀಪದ ಆಲೂರು ಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆ ವತಿಯಿಂದ ಆಲೂರುಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಸೊಳ್ಳೆ ಪರದೆಗಳನ್ನು ವಿತರಣೆ ಮಾಡಲಾಯಿತು.

ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಸೊಳ್ಳೆ ಪರದೆ ವಿತರಣೆ ಕಾರ್ಯಕ್ರಮದಲ್ಲಿ ರೋಟರಿ ಮಲ್ಲೇಶ್ವರ ಸಂಸ್ಥೆಯ ಅಧ್ಯಕ್ಷ ದಯಾನಂದ್ ಮಾತನಾಡಿ, ರೋಟರಿ ಸಂಸ್ಥೆಯು ಸಮಾಜ ಸೇವೆಯ ಜೊತೆಯಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದರು.

ಈ ಸಂದರ್ಭ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಪರ್ಣ ಕೃಷ್ಣಾನಂದ್ ಅವರು ಸ್ವಚ್ಛತೆ ಮತ್ತು ಡೆಂಗ್ಯೂ ತಡೆಗಟ್ಟುವ ಕುರಿತಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರೋಟರಿ ಮಲ್ಲೇಶ್ವರ ಸಂಸ್ಥೆ ಕಾರ್ಯದರ್ಶಿ ಎಚ್.ಇ. ಕಿರಣ್, ರೋಟರಿ ಸದಸ್ಯರಾದ ಎ.ಎಸ್. ರಾಮಣ್ಣ, ಉದಯಕುಮಾರ್, ಎ.ಜೆ. ವಿಜಯ್, ಎಂ.ವಿ. ವೆಂಕಟೇಶ್, ಮನೋಹರ್, ಲೋಕೇಶ್, ಸಂಪತ್, ನಾರಾಯಣಸ್ವಾಮಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಸುತ್ತಮುತ್ತಲಿನ ಅಂಗನವಾಡಿ ಕೇಂದ್ರಗಳ ಶಿಕ್ಷಕಿಯರು ಹಾಜರಿದ್ದರು.