ಸಿದ್ದಾಪುರ, ಜು. ೨೧: ಧಾರಾಕಾರ ಮಳೆ ನಡುವೆ ಕಾಡಾನೆಗಳು ವಸತಿ ಪ್ರದೇಶಗಳಲ್ಲಿ ದಾಂಧಲೆ ನಡೆಸುತ್ತಿವೆ. ಗುಹ್ಯ ಗ್ರಾಮದ ಕಾಫಿ ತೋಟಗಳಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳು ಬೀಡುಬಿಟ್ಟು ದಾಂಧಲೆ ನಡೆಸುತ್ತಿವೆ. ಅಲ್ಲದೆ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿವೆ.

ವಸತಿ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ಮನೆ ಅಂಗಳದಲ್ಲಿ ದಾಂಧಲೆ ನಡೆಸುತ್ತಿದ್ದು, ಗ್ರಾಮದಲ್ಲಿ ಆತಂಕ ಮೂಡಿದೆ. ಗ್ರಾಮಸ್ಥರು ಸಂಜೆ ಸಮಯದಲ್ಲಿ ಮನೆಯಿಂದ ಹೊರಬಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮದ ಅನೇಕ ರೈತರ ಜಮೀನುಗಳಿಗೆ ಅತ್ತೂರು ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಬಂದ ಕಾಡಾನೆಗಳು ಆನೆ ಕಂದಕಗಳನ್ನು ದಾಟಿ ಸಮೀಪದ ರೈತರ ಜಮೀನಿಗೆ ದಾಳಿ ಮಾಡಿ ಅಪಾರ ಪ್ರಮಾಣದ ಬೆಳೆಯನ್ನು ತುಳಿದು ತಿಂದು ನಷ್ಟಪಡಿಸಿವೆ.

ದೊಡ್ಡತ್ತೂರು ಗ್ರಾಮದ ರಾಮೇಗೌಡ, ಪಾರ್ವತಮ್ಮ, ತಿಮ್ಮಯ್ಯ, ಧನು ಎಂಬವರ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ, ಸಿಹಿಗೆಣಸು, ಮರಗೆಣಸು, ಬಾಳೆ ಬೆಳೆಯನ್ನು ತುಳಿದು ತಿಂದು ನಷ್ಟಪಡಿಸಿವೆ. ಅರಣ್ಯ ಇಲಾಖೆಯವರು ಸ್ಥಳ ಪರಿಶೀಲನೆ ನಡೆಸಿ ಪರಿಹಾರವನ್ನು ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.