ಕೂಡಿಗೆ, ಜು. ೨೧: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಅಧ್ಯಕ್ಷ ಭಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪ್ರಮುಖವಾಗಿ ಈಗಾಗಲೇ ಸುರಿಯುತ್ತಿರುವ ಮಳೆಯಿಂದಾಗಿ ಪ್ರಕೃತಿ ವಿಕೋಪ ಮತ್ತು ಡೆಂಗ್ಯೂ ರೋಗದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆಗಳು ನಡೆದವು. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ, ಚರಂಡಿ ದುರಸ್ತಿ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು.
ಅಲ್ಲದೆ ಈಗಾಗಲೇ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಕೇಂದ್ರ ವ್ಯಾಪ್ತಿಯಲ್ಲಿ ಸಿ.ಎನ್.ಜಿ. ಗ್ಯಾಸ್ ಘಟಕವನ್ನು ತೆರೆಯಲು ಉದ್ದೇಶಿಸಿರುವುದನ್ನು ತಡೆಯುವಂತೆ ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರು ವಿರೋಧ ವ್ಯಕ್ತಪಡಿಸಿ, ಯಾವುದೇ ರೀತಿಯ ಪರವಾನಗಿಯನ್ನು ನೀಡಬಾರದು ಎಂದು ಸಭೆಯ ನಡಾವಳಿಯ ಪುಸ್ತಕದಲ್ಲಿ ನೋಂದಣಿ ಮಾಡಿದರು.
ಚಿಕ್ಕತ್ತೂರು, ದೊಡ್ಡತ್ತೂರು, ಬೆಂಡೆಬೆಟ್ಟದ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಾಳಿ ಹೆಚ್ಚಾಗಿ ಸಮೀಪದ ರೈತರ ಜಮೀನಿಗೆ ಮತ್ತು ಹಗಲು ವೇಳೆಯಲ್ಲಿ ಗ್ರಾಮಗಳ ರಸ್ತೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ತುರ್ತಾಗಿ ಕಾಡಾನೆಗಳನ್ನು ಅತ್ತೂರು ಮೀಸಲು ಅರಣ್ಯ ಪ್ರದೇಶಗಳತ್ತ ಓಡಿಸಲು ಕ್ರಮ ಕೈಗೊಳ್ಳಲು ಪಂಚಾಯಿತಿ ವತಿಯಿಂದ ಪತ್ರ ವ್ಯವಹಾರ ಮಾಡುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಭಾಸ್ಕರ್ ನಾಯಕ್ ಮಾತನಾಡಿ, ಎಲ್ಲಾ ಸದಸ್ಯರ ಸಹಕಾರದೊಂದಿಗೆ ಗ್ರಾಮದ ಅಭಿವೃದ್ಧಿಗೆ ಪೂರಕವಾದ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರದ ಆವರಣದಲ್ಲಿರುವ ಸರ್ವೆ ನಂಬರ್ ೧೧/೧.ರ ೯ ಸೆಂಟ್ ಜಾಗದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡವನ್ನು ನಿರ್ಮಾಣ ಮಾಡುವ ವಿಷಯದ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರದ ಮಟ್ಟದ ಹಂತದಲ್ಲಿದ್ದು, ಈ ಪ್ರಕ್ರಿಯೆ ಮುಗಿದ ತಕ್ಷಣವೇ ನೂತನ ಕಟ್ಟಡದ ಕಾಮಗಾರಿಯನ್ನು ಕೈಗೊಳ್ಳಲಾಗುವುದು. ಅಲ್ಲದೆ ಎಲ್ಲಾ ವಾರ್ಡ್ನ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಕೈಗೊಂಡು ಕ್ರಮ ವಹಿಸಲಾಗುವುದು ಎಂದರು.
ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರು ಸರಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.