ಸೋಮವಾರಪೇಟೆ, ಜು. ೨೧: ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಅಭಿವೃದ್ಧಿಪಡಿಸಿ, ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿ.ಎಂ.ಶ್ರೀ. ಯೋಜನೆಗೆ ಸೋಮವಾರಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಭಾಜನವಾಗಿದೆ.
ಪ್ರಸಕ್ತ ೨೦೨೪-೨೫ನೇ ಸಾಲಿನಲ್ಲಿ ಈ ಶಾಲೆಯಲ್ಲಿ ೪೩೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎಲ್.ಕೆ.ಜಿ.ಯಿಂದ ೮ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಪಿಎಂಶ್ರೀ ಯೋಜನೆಯಡಿಯಲ್ಲಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ರೂ. ೫೦ ಲಕ್ಷ ಅನುದಾನ ನೀಡುತ್ತದೆ.
ಈ ಅನುದಾನ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲು ಅನುಕೂಲಕರವಾಗಿದ್ದು, ಸರ್ಕಾರಿ ಶಾಲೆಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ. ಈ ಯೋಜನೆ ೫ ವರ್ಷಗಳ ಅವಧಿಯನ್ನು ಹೊಂದಿದ್ದು, ೨೦೨೪-೨೫ನೇ ಸಾಲಿನಲ್ಲಿ ನಮ್ಮ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆ, ಪೀಠೋಪಕರಣಗಳು, ಆಟದ ಸಾಮಗ್ರಿಗಳು, ಕಲಿಕಾ ಸಾಮಗ್ರಿಗಳು, ಸ್ಮಾರ್ಟ್ ಬೋರ್ಡ್, ಪ್ರಯೋಗಾಲಯ ನಿರ್ಮಾಣ, ಶೌಚಾಲಯಗಳ ನಿರ್ಮಾಣಕ್ಕೆ ಕ್ರಿಯಾ ಯೋಜನೆ ತಯಾರಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಯಶೋಧ ತಿಳಿಸಿದ್ದಾರೆ.