ನಾಪೋಕ್ಲು, ಜು. ೨೨: ಇಲ್ಲಿನ ಕಾವೇರಿ ನದಿ ತೀರದ ಪ್ರವಾಹ ಪೀಡಿತ ಪ್ರದೇಶ ಚೆರಿಯಪರಂಬುವಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ಸ್ಥಳೀಯ ಪ್ರಮುಖರು ಮಾತನಾಡಿ ಇಲ್ಲಿ ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಜೀವನ ಸಾಗಿಸುವುದು ಕಷ್ಟಕರವಾಗಿದೆ. ರಸ್ತೆ ಸಂಪರ್ಕ ಕಡಿತಗೊಳ್ಳುತ್ತದೆ. ಸೂಕ್ತ ಪರಿಹಾರ ಒದಗಿಸುವಂತೆ ಕೋರಿದರು. ಸಮಸ್ಯೆಯನ್ನು ಆಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಸಚಿವರು ಸರಕಾರದೊಂದಿಗೆ ಚರ್ಚಿಸಿ ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.
ಶಾಸಕ ಎ. ಎಸ್. ಪೊನ್ನಣ್ಣ ಮಾತನಾಡಿ, ಹಲವಾರು ವರ್ಷ ಗಳಿಂದ ಇಲ್ಲಿ ಪ್ರವಾಹದಿಂದಾಗಿ ರಸ್ತೆ ಸಂಪರ್ಕದ ಸಮಸ್ಯೆ ಇದೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ೧.೩೦ ಕೋಟಿ ರೂ.ಗಳ ಕ್ರಿಯಾಯೋಜನೆ ಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಆದಷ್ಟು ಶೀಘ್ರ ಕಾಮಗಾರಿ ನಡೆಯಲಿದೆ ಎಂದರು.
ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ರಾಜಾ, ಎಸ್.ಪಿ.ಕೆ. ರಾಮರಾಜನ್, ಜಿಲ್ಲಾ ಪಂಚಾಯತಿ ಸಿಇಓ ಆನಂದ್, ಜಿಲ್ಲಾ ಪಂಚಾಯಿತಿ ಕಾರ್ಯ ಪಾಲಕ ಅಭಿಯಂತರ ರಘು, ಅಶೋಕ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಕಂದಾಯ ಪರೀಕ್ಷಕ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ, ನೆರವಂಡ ಉಮೇಶ್, ಎಂ ಯಚ್. ಅಬ್ದುಲ್ ರೆಹಮಾನ್, ಬಾಚಮಂಡ ಲವ ಚಿನ್ನಪ್ಪ, ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ಸದಸ್ಯರಾದ ಮಾಚೆಟ್ಟಿರ ಕುಸು ಕುಶಾಲಪ್ಪ, ಕುಲ್ಲೇಟಿರ ಅರುಣ್ ಬೇಬ, ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಮಿರ್ಷದ್, ಸಿರಾಜುದ್ದೀನ್ ಸೇರಿದಂತೆ ಇನ್ನಿತರರು ಹಾಜರಿದ್ದರು.