ಕೂಡಿಗೆ, ಜು. ೨೨: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯು ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಮತ್ತು ವರ್ಷಂಪ್ರತಿಯAತೆ ಈ ಸಾಲಿನಲ್ಲಿ ಹಾರಂಗಿ ಅಚ್ಚುಕಟ್ಟು ಪ್ರದೇಶದ ರೈತರ ಖಾರೀಫ್ ಬೆಳೆಯ ಬೇಸಾಯಕ್ಕೆ ತಾ.೨೮ ರಿಂದ ನಾಲೆಗಳ ಮೂಲಕ ನೀರನ್ನು ಹರಿಸಲು ಬೆಂಗಳೂರಿನಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೀರಾವರಿ ಇಲಾಖೆಯ ಕಾರ್ಯಸೂಚಿಯಂತೆ ಮತ್ತು ಪಿರಿಯಾಪಟ್ಟಣ, ಹುಣಸೂರು, ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ನೀರು ಬಳಕೆದಾರರ ಮಹಾಮಂಡಲ ಅಧ್ಯಕ್ಷರು, ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು, ನೀರು ಬಳಕೆದಾರ ಸಂಘದ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮೂರು ಜಿಲ್ಲೆಯ ರೈತರ ಬೇಸಾಯಕ್ಕೆ ಅನುಕೂಲವಾಗುವಂತೆ ತಾ.೨೮ ರಿಂದ ಮುಖ್ಯ ನಾಲೆ ಸೇರಿದಂತೆ ಎಡದಂಡೆ, ಮತ್ತು ಬಲದಂಡೆಯ ನಾಲೆಗಳಲ್ಲಿ ನೀರನ್ನು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಪಶುಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್, ಹುಣಸೂರು ಕ್ಷೇತ್ರದ ಶಾಸಕ ಹರೀಶ್ ಗೌಡ, ಕೆ.ಆರ್.ನಗರ ಕ್ಷೇತ್ರದ ಶಾಸಕ ರವಿಶಂಕರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಮುಖ್ಯ ಇಂಜಿನಿಯರ್ ವೆಂಕಟೇಶ್, ಹಾರಂಗಿ ವೃತ್ತ ಅಧೀಕ್ಷಕ ಅಭಿಯಂತರ ಕೆ.ಕೆ. ರಘುಪತಿ, ಅಭಿಯಂತರ ಐ.ಕೆ. ಪುಟ್ಟಸ್ವಾಮಿ, ಮಹಾ ಮಂಡಲದ ಅಧ್ಯಕ್ಷ ಚೌಡೇಗೌಡ, ಇತರರು ಪಾಲ್ಗೊಂಡಿದ್ದರು.