ಸಿದ್ದಾಪುರ, ಅ. ೫: ವಸತಿ ಪ್ರದೇಶದಲ್ಲಿ ಕಾಡಾನೆಗಳು ಲಗ್ಗೆ ಇಟ್ಟು ಕೃಷಿ ಫಸಲುಗಳನ್ನು ಹಾನಿಗೊಳಿಸಿರುವ ಘಟನೆ ನೆಲ್ಯಹುದಿಕೇರಿ ಗ್ರಾಮದ ಶಾಲೆಯ ರಸ್ತೆಯಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ರಾತ್ರಿ ಸಮಯದಲ್ಲಿ ವಸತಿ ಪ್ರದೇಶಗಳಲ್ಲಿ ಕಂಡುಬರುತ್ತಿದೆ. ಕಾಡಾನೆಯು ಮನೆಗಳ ಬಳಿ ಕೃಷಿ ಮಾಡಿರುವ ಫಸಲಿರುವ ಅಡಿಕೆ ಹಾಗೂ ತೆಂಗಿನ ಮರಗಳನ್ನು ಎಳೆದು ಹಾಕಿ ಧ್ವಂಸಗೊಳಿಸುತ್ತಿದೆ. ಇದಲ್ಲದೆ ಕಾಫಿ ಗಿಡಗಳನ್ನು ತುಳಿದು ನಾಶಗೊಳಿಸುತ್ತದೆ ಎಂದು ಕೃಷಿಕರಾದ ಟಿ.ಟಿ. ಉದಯ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರ ಮಾಡುವುದಾಗಿ ಈ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳು ಭರವಸೆಯನ್ನು ನೀಡಿದ್ದರು. ಆದರೆ ಯಾವುದೇ ಕ್ರಮವಾಗಿಲ್ಲ ಎಂದು ಕೃಷಿಕರು ಆರೋಪಿಸಿದ್ದಾರೆ. ಕೂಡಲೇ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾಡಾನೆಗಳ ಹಾವಳಿಯಿಂದಾಗಿ ಗ್ರಾಮಸ್ಥರು ಸಂಜೆ ಮನೆಯಿಂದ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.