ಪೊನ್ನಂಪೇಟೆ, ಆ. ೫: ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ( ಕೆ ಎಲ್ ೧೫ ಎ ೨೪೫೫) ಹಾಗೂ ಪಿಕಪ್ ವಾಹನ (ಕೆಎ ೦೯ ಡಿ ೯೭೬೨) ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲೂಕಿನ ದೇವರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಗೋಳ ಗ್ರಾಮದಲ್ಲಿ ನಡೆದಿದೆ. ಕೇರಳದ ಕೋಯಿಕೋಡ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೇರಳ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ಹಾಗೂ ಮೈಸೂರಿನಿಂದ ಕೇರಳದ ಮಟ್ಟನೂರಿಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನದ ನಡುವೆ ತಾ. ೫ ರಂದು ಬೆಳಿಗ್ಗೆ ೨.೪೦ ರ ಸಮಯದಲ್ಲಿ ಡಿಕ್ಕಿ ಸಂಭವಿಸಿದೆ. ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಪಿಕ್ ಅಪ್ ವಾಹನ ಬಸ್‌ಗೆ ಡಿಕ್ಕಿಯಾಗಿದೆ. ಅಪಘಾತದಿಂದ ಬಸ್‌ನ ಮುಂಭಾಗ ಜಖಂಗೊAಡಿದ್ದು, ಬಸ್ ಚಾಲಕ ಪ್ರವೀಣ್ ಹಾಗೂ ನಿರ್ವಾಹಕ ರಾಶೀದ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಬಸ್‌ನಲ್ಲಿದ್ದ ೩೮ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗೋಣಿಕೊಪ್ಪಲು ಠಾಣಾಧಿಕಾರಿ ರೂಪಾದೇವಿ ಬಿರಾದಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.