ಸೋಮವಾರಪೇಟೆ, ಆ. ೫: ಭಾರೀ ಮಳೆ ಗಾಳಿಗೆ ಮನೆಗಳನ್ನು ಕಳೆದುಕೊಂಡ ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂತ್ರಸ್ತ ಕುಟುಂಬಗಳಿಗೆ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.

ಭಾರೀ ಮಳೆಯಿಂದಾಗಿ ಹಾನಿ ಸಂಭವಿಸಿದ ಮನೆಗಳನ್ನು ಖುದ್ದು ಪರಿಶೀಲಿಸಿದ ರಂಜನ್, ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು. ದಿನಸಿ ಸಾಮಾಗ್ರಿಗಳನ್ನು ಒಳಗೊಂಡ ಕಿಟ್‌ಗಳನ್ನು ವಿತರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದ ಸಂದರ್ಭ ಮಳೆಹಾನಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಲಾಗುತ್ತಿತ್ತು. ಪರಿಹಾರದ ಮೊತ್ತವನ್ನೂ ಹೆಚ್ಚಿಸಲಾಗಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಲು ವಿಳಂಬ ಮಾಡುತ್ತಿರುವುದು ಖಂಡನೀಯ ಎಂದರು.

ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಗ್ರಾ.ಪಂ. ಸದಸ್ಯ ಶೇಖರ್, ನವೀನ್‌ಕುಮಾರ್, ಪ್ರಮುಖರಾದ ಕೆ.ಕೆ. ಸುಧಾಕರ್, ಉಮೇಶ್, ದಿವಾಕರ್, ಆದರ್ಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.