ಮಡಿಕೇರಿ, ಆ. ೬: ಕೊಡಗು ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಮಳೆಹಾನಿ ಪ್ರದೇಶ ವೀಕ್ಷಣೆಗೆ ಜಿಲ್ಲೆಗೆ ಆಗಮಿಸಿದ ಸಂದರ್ಭ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಸಮ್ಮುಖದಲ್ಲಿ ಯೂನಿಯನ್ನ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್. ಭರತ್, ಈಗಿನ ಕಾಂಗ್ರೆಸ್ ಸರಕಾರ ಈ ಹಿಂದಿನ ಬಿಜೆಪಿ ಸರಕಾರ ತೆಗೆದುಕೊಂಡ ನಿರ್ಧಾರದಂತೆ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಜಮೀನನ್ನು ನೀಡಲು ಮುಂದಾಗಿದೆ. ಇದರಿಂದ ಕಡು ಬಡತನ ದಲ್ಲಿರುವ ಆದಿವಾಸಿ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ವಂಚನೆ ಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನವಿರೋಧಿ ಆದೇಶವನ್ನು ತಕ್ಷಣ ಹಿಂಪಡೆಯಬೇಕು, ಸರಕಾರಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ಜಿಲ್ಲೆಯ ನಿವೇಶನ ರಹಿತರಿಗೆ ನೀಡಬೇಕು, ೨೦೧೮-೧೯ರಲ್ಲಿ ಮಹಾ ಮಳೆಯಿಂದ ಮನೆ ಕಳೆದುಕೊಂಡಿರುವ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ನೀಡಬೇಕು, ನಿರಾಶ್ರಿತರ ಹೊಸ ಪಟ್ಟಿಯನ್ನು ತಯಾರಿಸಬೇಕು. ವಾಲ್ನೂರು ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ೮.೫ ಎಕರೆ ಜಾಗದಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು, ಮನೆ ನಿರ್ಮಿಸಿಕೊಳ್ಳಲು ತಲಾ ರೂ. ೧೦ ಲಕ್ಷ ನೀಡಬೇಕು, ನಿವೇಶನ ಹೊಂದಿರುವ ದಾಖಲಾತಿಗಳಿಲ್ಲದ ಸಾವಿರಾರು ಮನೆಗಳಿದ್ದು, ೯೪ ಸಿ ಮೂಲಕ ಹಕ್ಕುಪತ್ರ ವಿತರಣೆಯಾಗದೆ ಇರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು. ಜಿಲ್ಲೆಯಲ್ಲಿ ನಿರಂತರವಾಗಿರುವ ವನ್ಯಜೀವಿ ದಾಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮನವಿ ಸಲ್ಲಿಸುವ ಸಂದರ್ಭ ಸಿಐಟಿಯು ಜಿಲ್ಲಾ ಖಜಾಂಚಿ ಎನ್.ಡಿ. ಕುಟ್ಟಪ್ಪನ್ ಹಾಗೂ ಪ್ರಮುಖರಾದ ಶೌಕತ್ ಹಾಜರಿದ್ದರು.