ಕುಶಾಲನಗರ, ಆ. ೭: ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ತನಕ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಅವರು ಕುಶಾಲನಗರದಿಂದ ನೂರಾರು ಕಾರ್ಯಕರ್ತರೊಂದಿಗೆ ಮೈಸೂರು ಚಲೋ ಪಾದಯಾತ್ರೆಗೆ ಮಂಡ್ಯ ಕಡೆಗೆ ತೆರಳುತ್ತಿದ್ದ ಸಂದರ್ಭ ಬುಧವಾರ ಬೆಳಿಗ್ಗೆ ಕುಶಾಲನಗರ ಗಣಪತಿ ದೇವಾಲಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಅವರು ಮಾಡಿರುವ ಅಪರಾಧ ಒಪ್ಪಿಕೊಂಡು ತಕ್ಷಣ ರಾಜೀನಾಮೆ ನೀಡಬೇಕು ಎಂದು ರಂಜನ್ ಆಗ್ರಹ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಾ. ೯ರಂದು ಕೊಡಗು ಜಿಲ್ಲೆಯಿಂದ ಸುಮಾರು ೩೦೦೦ಕ್ಕೂ ಅಧಿಕ ಕಾರ್ಯಕರ್ತರು ಮೈಸೂರು ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಕುಶಾಲನಗರ ನಗರಾಧ್ಯಕ್ಷ ಎಂ.ಎA. ಚರಣ್, ಪ್ರಧಾನ ಕಾರ್ಯದರ್ಶಿ ಮಧುಸೂದನ್, ಜಿಲ್ಲೆಯ ವಿವಿಧ ಪಂಚಾಯಿತಿ ಪ್ರತಿನಿಧಿಗಳು ಪಕ್ಷದ ಪ್ರಮುಖರು ಕಾರ್ಯಕರ್ತರು ಇದ್ದರು.