ಮಡಿಕೇರಿ, ಆ. ೭: ಭಾಗಮಂಡಲ ಹಾಗೂ ತಲಕಾವೇರಿಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಭೇಟಿ ನೀಡಿ ಅಪೂರ್ಣ ತಡೆಗೋಡೆ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆ ನೀಡಿದರು.
ಭಗಂಡೇಶ್ವರ ಹಾಗೂ ತಲಕಾವೇರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಐಶ್ವರ್ಯ ಅವರಿಗೆ ಅಲ್ಲಿನ ಪ್ರಧಾನ ಅರ್ಚಕರಾದ ಹರೀಶ್ ಭಟ್ ಅವರು ತಡೆಗೋಡೆ ಕಾಮಗಾರಿ ಅಪೂರ್ಣಗೊಂಡಿರುವ ಬಗ್ಗೆ ಗಮನ ಸೆಳೆದರು.
ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿ ಭೂಕುಸಿತ ನಡೆದ ಜಾಗದಲ್ಲಿ ಮುಂಜಾಗ್ರತ ಕ್ರಮಕ್ಕಾಗಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದ್ದು, ಅದು ಅಪೂರ್ಣಗೊಂಡು ಕಾಮಗಾರಿಯೂ ಸ್ಥಗಿತಗೊಂಡಿದೆ ಎಂದು ಮಾಹಿತಿ ನೀಡಿದರು.
ನಂತರ ಸ್ಥಳಕ್ಕೆ ತೆರಳಿದ ಅಧಿಕಾರಿ ಐಶ್ವರ್ಯ ಈ ಬಗ್ಗೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಪೂರ್ಣಗೊಳಿಸುವಲ್ಲಿ ಕ್ರಮವಹಿಸುವುದರೊಂದಿಗೆ ಜನರ ಬೇಡಿಕೆಗಳಿಗೆ ಸ್ಪಂದಿಸಿ ಯೋಜನೆಗಳನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ಭಗಂಡೇಶ್ವರ-ತಲಕಾವೇರಿ ದೇವಾಲಯ ವ್ಯವಸ್ಥಾಪನ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಹಾಜರಿದ್ದರು.