ಸೋಮವಾರಪೇಟೆ, ಆ. ೭: ೨೦೧೭ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಿಂದ ೨೦೧೬ ಕ್ಕಿಂತಲೂ ಮೊದಲು ನೇಮಕವಾದ ಶಿಕ್ಷಕರಿಗೆ ಆಗುತ್ತಿರುವ ಬಡ್ತಿ, ವರ್ಗಾವಣೆಯಲ್ಲಿನ ಅನ್ಯಾಯಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಂಘದ ಪದಾಧಿಕಾರಿಗಳು, ತಹಶೀಲ್ದಾರ್ ನವೀನ್‌ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೆ ೨೦೧೬ರ ಪೂರ್ವದಂತೆ ಪ್ರೌಢಶಾಲೆಗಳಿಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಗಮನ ಸೆಳೆದರು.

ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ನಿರಂತರ ಹೋರಾಟ ನಡೆಸಲು ರಾಜ್ಯ ಸಂಘದಿAದ ಕರೆ ನೀಡಲಾಗಿದೆ. ತಾ. ೧೨ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶಿಕ್ಷಕರ ಬೃಹತ್ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಮುಂಚಿತವಾಗಿ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಮನವಿ ಸಲ್ಲಿಸಲಾಗುತ್ತಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಟಿ.ಕೆ. ಬಸವರಾಜ್ ತಿಳಿಸಿದರು.

ಈ ಸಂದರ್ಭ ರಾಜ್ಯ ಸಮಿತಿ ಸದಸ್ಯ ಎಸ್.ಎ. ಯೋಗೇಶ್, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಂ. ನಾಗೇಶ್, ನಿರ್ದೇಶಕ ಎಸ್.ಎಂ. ಸುರೇಶ್, ಜಿಲ್ಲಾ ಸಂಘದ ಉಪಾಧ್ಯಕ್ಷ ಕರುಂಬಯ್ಯ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಪಿ. ಕವಿತ, ಉಪಾಧ್ಯಕ್ಷೆ ಎಲ್.ಎಂ. ಪ್ರೇಮಾ, ಖಜಾಂಚಿ ಎಸ್.ಎಂ. ರವಿ, ಸಹಕಾರ್ಯದರ್ಶಿ ಹೆಚ್.ಎಸ್. ಉಮಾದೇವಿ, ಸಂಘಟನಾ ಕಾರ್ಯದರ್ಶಿ ಎಸ್.ಎಂ. ಆಶಾ, ನಿರ್ದೇಶಕಿ ತಂಗಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.