ಕುಶಾಲನಗರ, ಆ. ೮: ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣಗಳು ರಾಜ್ಯದಲ್ಲಿ ಪ್ರತಿಧ್ವನಿಸು ತ್ತಿರುವ ನಡುವೆ ಕುಶಾಲನಗರದಲ್ಲಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರತಿಭಟನೆ ನಡೆಯಿತು.
ಶೋಷಿತ ವರ್ಗಗಳ ಧ್ಚನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಅಪಪ್ರಚಾರ ಹಾಗೂ ಪಿತೂರಿ ಖಂಡಿಸಿ ಮೆರವಣಿಗೆ ನಡೆಸಿ ಬಿಜೆಪಿ ಮೈತ್ರಿ ಪಕ್ಷದ ಧೋರಣೆಯನ್ನು ಖಂಡಿಸಿತು.
ಕೊಡಗು ಅಹಿಂದ ಒಕ್ಕೂಟ ಹಾಗೂ ಕೊಡಗು ಜಿಲ್ಲಾ ಕುರುಬ ಸಂಘ ಹಾಗೂ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ನೂರಾರು ಕಾರ್ಯಕರ್ತರು ಇಲ್ಲಿನ ಪ್ರವಾಸಿ ಮಂದಿರ ಬಳಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿದರು.
ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಯಘೋಷ ಹಾಕಿದ ಪ್ರತಿಭಟನಾಕಾರರು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು. ಕಾರ್ಯಪ್ಪ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ರಚಿಸಿದರು.
ಈ ಸಂದರ್ಭ ಉಪಸ್ಥಿತರಿದ್ದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ರಾಜ್ಯದ ಬಡವರು ಹಾಗೂ ಅವಕಾಶ ವಂಚಿತ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಅವರ ಬದುಕಿಗೆ ನೆರವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಸಹಿಸದೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಡಾ ಮತ್ತಿತರ ವಿಚಾರ ಮುಂದಿಟ್ಟುಕೊAಡು ಪಾದಯಾತ್ರೆ ನಡೆಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಲೇವಡಿ ಮಾಡಿದರು.
ವಿಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುತ್ತ ಸಿದ್ದರಾಮಯ್ಯ ಅವರಿಗೆ ಕಪ್ಪು ಚುಕ್ಕೆ ತರಲು ಹುನ್ನಾರ ನಡೆಸುತ್ತಿದ್ದಾರೆ. ಆದರೆ ಕಾನೂನು ನಮ್ಮ ಪರವಾಗಿದೆ ಕಾನೂನಾತ್ಮಕ ಹೋರಾಟ ನಡೆಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಶಕ್ತಿ ತುಂಬುತ್ತೇವೆ ಎಂದು ಮಂತರ್ ಗೌಡ ಹೇಳಿದರು.
ಅಹಿಂದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ.ಶಾಂತಪ್ಪ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಶಕ್ತಿಯಾಗಿ ಬೆಳೆದಿದ್ದಾರೆ. ಈ ಶಕ್ತಿಯನ್ನು ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ. ಶೋಷಿತ ವರ್ಗಗಳ ಧ್ಚನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರಲು ವಿರೋಧ ಪಕ್ಷಗಳು ಪಿತೂರಿ ನಡೆಸುತ್ತಿವೆ ಎಂದು ದೂರಿದರು.
ಮುಖ್ಯಮಂತ್ರಿ ವಿರುದ್ಧ ರಾಜ್ಯದಲ್ಲಿ ಕುತಂತ್ರ ನಡೆಯುತ್ತಿದ್ದು, ಇದರ ವಿರುದ್ಧ ಬೀದಿಗೆ ಇಳಿದು ಹೋರಾಟ ನಡೆಸುವುದು ಅನಿವಾರ್ಯವಾಗಿ ಎಂದು ಹೇಳಿದರು.
ಅಹಿಂದ ಒಕ್ಕೂಟದ ಜಿಲ್ಲಾ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಸಮಾಜದ ಕಟ್ಟ ಕಡೆಯ ಬಡವರಿಗೂ ಸಾಮಾಜಿಕ ನ್ಯಾಯ ದಕ್ಕಬೇಕು ಎಂಬುದು ಸಿದ್ದರಾಮಯ್ಯ ಅವರ ನಿಲುವು. ಆದರೆ ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಪಾದಯಾತ್ರೆ ಎಂಬ ರಾಜಕೀಯ ನಾಟಕವಾಡುತ್ತಿದ್ದಾರೆ. ಇದರ ಕುರಿತು ಜನರಿಗೆ ಸತ್ಯ ತಿಳಿಸಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ತಪ್ಪು ಸಂದೇಶ ಹರಡುತ್ತಿರುವ ವಿರೋಧ ಪಕ್ಷಗಳ ವರ್ತನೆಗೆ ಸಮಾಜದಲ್ಲಿ ವ್ಯಾಪಕ ವಿರೋಧ ವ್ಯಕ್ಯವಾಗುತ್ತಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ರಾಜ್ಯಪಾಲರನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಕಾನೂನಿನ ವಿರುದ್ಧವಾಗಿ ರಾಜ್ಯಪಾಲರು ವರ್ತಿಸುತ್ತಿರುವುದು ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅರುಣ್ ಮಾಚಯ್ಯ, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ. ಚಂಗಪ್ಪ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯಾಕೂಬ್, ಜಿಲ್ಲಾ ಕ್ರೆöÊಸ್ತ ಸಂಘದ ಅಧ್ಯಕ್ಷ ಬೇಬಿಮ್ಯಾಥ್ಯು, ಕೆಪಿಸಿಸಿ ಕಾರ್ಯದರ್ಶಿ ಹೆಚ್.ಕೆ. ನಟೇಶ್ ಗೌಡ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮುಖಂಡರಾದ ಟಿ.ಪಿ. ಹಮೀದ್, ಸುನೀತಾ, ಪೃಥ್ವಿ, ಶೈಲಾ ಕುಟ್ಟಪ್ಪ, ಮತ್ತಿತರರು ಪಾಲ್ಗೊಂಡಿದ್ದರು.