ಕೂಡಿಗೆ, ಆ. ೧೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಮ ನೈರ್ಮಲ್ಯ ಸಮಿತಿ ವತಿಯಿಂದ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಎದೆ ಹಾಲಿನ ಮಹತ್ವದ ಬಗ್ಗೆ ಮತ್ತು ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ತಿಳುವಳಿಕೆ ನೀಡುವ ಅಂಗವಾಗಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಸದಸ್ಯ ಅನಂತ್ ಕುಮಾರ್ ವಹಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ರೋಗವು ಹೆಚ್ಚಾಗಿ ಕಾಣಿಸಿ ಕೊಳ್ಳುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯ ಅರುಣ್ ರಾವ್ ಮಾತನಾಡಿ, ಗ್ರಾಮ ಪಂಚಾಯಿತಿ ವತಿಯಿಂದ ಈ ಸಾಲಿನಲ್ಲಿ ಶುಚಿತ್ವಕ್ಕೆ ಆಧ್ಯತೆಯನ್ನು ನೀಡಲಾಗುತ್ತಿದೆ. ಅಲ್ಲದೆ ಗ್ರಾಮ ಪಂಚಾಯಿತಿ ನಿರ್ಣಯದಂತೆ ರೋಗ ನಿರೋಧಕ ಶಕ್ತಿಯ ಔಷಧಿ ಗಳನ್ನು ಸಿಂಪಡಣೆ ಮಾಡಲಾಗುತ್ತಿದೆ, ಇದರ ಜೊತೆಯಲ್ಲಿ ಗ್ರಾಮಸ್ಥರು, ಸಾರ್ವಜನಿಕರು ಜಾಗೃತರಾಗಿ ಡೆಂಗ್ಯೂ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

ಹೆಬ್ಬಾಲೆ ಆರೋಗ್ಯ ಸಹಾಯಕಿ ಪೂರ್ಣಿಮ ಅವರು ಎದೆ ಹಾಲಿನ ಮಹತ್ವ ಮತ್ತು ಗರ್ಭಿಣಿ, ಬಾಣಂತಿಯರಿಗೆ ಮಕ್ಕಳ ಸುರಕ್ಷತೆ ಬಗ್ಗೆ ಮಾಹಿತಿಯನ್ನು ಒದಗಿಸಿದರು.

ಈ ಸಂದರ್ಭ ಪಂಚಾಯಿತಿ ಸದಸ್ಯ ಶಿವಕುಮಾರ್, ಆಶಾ ಕಾರ್ಯಕರ್ತೆ ಎಲ್. ಪವಿತ್ರ, ಅಂಗನವಾಡಿ ಕಾರ್ಯಕರ್ತೆ ಯಶಸ್ವಿನಿ ಸೇರಿದಂತೆ ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ವಿವಿಧ ಮಹಿಳಾ ಸಂಘಟನೆಯ ಪ್ರಮುಖರು ಹಾಜರಿದ್ದರು.