ಮಡಿಕೇರಿ, ಆ. ೧೪: ಪ್ರೀತಿಸಿದ ಯುವಕ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿಯೋರ್ವಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ನಡೆದಿದೆ. ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೋರ ಗ್ರಾಮ ನಿವಾಸಿ ಅಯ್ಯಪ್ಪ ಎಂಬವರ ೨೦ ವರ್ಷ ಪ್ರಾಯದ ಮಗಳು ಅದೇ ಗ್ರಾಮದ ನಿವಾಸಿ ಗಣಪತಿ (ಚುಮ್ಮಿ) ಎಂಬಾತನೇ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವತಿಯನ್ನು ಗರ್ಭವತಿಗೊಳಿಸಿ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿ ವಿಚಾರ ತಂದೆ - ತಾಯಿಗೆ ತಿಳಿದರೆ ಬೇಸರ ಮಾಡಿಕೊಳ್ಳುತ್ತಾರೆ ಎಂದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ. ಪೋಷಕರು ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಆರೋಪಿ ಗಣಪತಿ ವಿರುದ್ಧ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ ೬೯ ಬಿಎನ್‌ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ಪತ್ತೆಗಾಗಿ ಡಿವೈಎಸ್ಪಿ ಆರ್. ಮೋಹನ್ ಕುಮಾರ್, ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, ಠಾಣಾಧಿಕಾರಿ ಮಂಜುನಾಥ, ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಗಣಪತಿ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.