ಮಡಿಕೇರಿ, ಆ. ೧೪: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ಶಿವಮೊಗ್ಗ ವ್ಯಾಪ್ತಿಯ ವಿಸ್ತರಣಾ ಶಿಕ್ಷಣ ಘಟಕ ಮಡಿಕೇರಿ, ಅರಣ್ಯ ಮಹಾವಿದ್ಯಾಲಯ, ಪೊನ್ನಂಪೇಟೆ, ಕೃಷಿ ಮತ್ತು ತೋಟಗಾರಿಕೆ ಸಂಶೋಧನ ಕೇಂದ್ರ, ಪೊನ್ನಂಪೇಟೆ ಹಾಗೂ ಕೃಷಿ ಇಲಾಖೆ ವೀರಾಜಪೇಟೆ ತಾಲೂಕು ಮತ್ತು ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪ, ಇವರುಗಳ ಸಂಯುಕ್ತ ಆಶ್ರಯದಲ್ಲಿ ತಾ. ೧೫ರಂದು (ಇಂದು) ಅಪರಾಹ್ನ ೧೨:೩೦ ಗಂಟೆಗೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮದಲ್ಲಿ ಯಾಂತ್ರೀಕೃತ ಭತ್ತ ನಾಟಿಯ ಕುರಿತು ತರಬೇತಿ ಹಾಗೂ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗಿದೆ. ಈ ಸಂದÀರ್ಭ ಶಾಲಾ-ಕಾಲೇಜು ಮಕ್ಕಳಿಗೆ ಕೆಸರುಗದ್ದೆ ಓಟ ಹಾಗೂ ಭತ್ತ ನಾಟಿ ಸ್ಪರ್ಧೆಗಳನ್ನೂ ಸಹ ಆಯೋಜಿಸಲಾಗಿದೆ. ಕಾರ್ಯಕ್ರಮಗಳು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಭತ್ತದ ಗದ್ದೆಯಲ್ಲಿ ನಡೆಯಲಿದ್ದು, ಶಾಸಕರು ಕಾರ್ಯಕ್ರಮವನ್ನು ಉದ್ಘಾಟಿಸಿ ಯಾಂತ್ರೀಕೃತ ಭತ್ತದ ನಾಟಿಯಲ್ಲಿ ಭಾಗವಹಿಸಲಿದ್ದಾರೆ. ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್ ಡಾ. ಸಿ.ಜಿ. ಕುಶಾಲಪ್ಪÀ ಅವರು ಮುಖ್ಯ ಅತಿಥಿಗಳಾಗಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕ ಸೋಮೆಂಗಡ ಗಣೇಶ್ ತಿಮ್ಮಯ್ಯ ಪ್ರಮುಖ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

ಕೃಷಿ ವಿಶ್ವವಿದ್ಯಾಲಯ ಹಾಗೂ ಕೆ.ವಿ.ಕೆ, ಗೋಣಿಕೊಪ್ಪಲಿನ ವಿಜ್ಞಾನಿಗಳು ತಾಂತ್ರಿಕ ಮಾಹಿತಿ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಗಳ ರೈತ ಮಹಿಳೆಯರು, ರೈತ ಮಹನೀಯರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪ್ರಕಟಣೆ ಕೋರಿದೆ.