ಮಡಿಕೇರಿ, ಆ. ೧೫: ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಮಡಿಕೇರಿಯ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಯಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿ ಘಟನೆ ಖಂಡಿಸಿದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣ ದಾರಿ ತಪ್ಪದಂತೆ ಎಚ್ಚರ ವಹಿಸಬೇಕೆಂದು ಆಗ್ರಹಿಸಿದರು. ಕರ್ತವ್ಯದ ವೇಳೆ ವೈದ್ಯಕೀಯ ವೃತ್ತಿಪರರ ಸುರಕ್ಷತೆ ಮತ್ತು ಭದ್ರತೆಗೆ ಕ್ರಮ ಕೈಗೊಳ್ಳಬೇಕು. ರೋಗಿಗಳ ಪ್ರಾಣ ಉಳಿಸುವ ವೈದ್ಯರ ಜೀವವನ್ನೇ ತೆಗೆಯುವ ವಿಕೃತ ಮನಸ್ಥಿತಿಯ ಜನರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆ ವಿಧಿಸಬೇಕು. ವೈದ್ಯ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿದರು.