ಕುಶಾಲನಗರ, ಆ. ೧೬: ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಪ್ರಬಂಧ ಸ್ಪರ್ಧೆ ಮತ್ತು ದೇಶಭಕ್ತಿ ಗಾಯನ ಸ್ಪರ್ಧೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕುಶಾಲನಗರ ಜೂನಿಯರ್ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಡಾ. ಸದಾಶಿವ ಪಲ್ಲೇದ್ ಅವರು, ಕುಶಾಲನಗರ ತಾಲೂಕು ಘಟಕ ಸಾಹಿತ್ಯ ಪರಿಷತ್ತು ಮೂಲಕ ಕಾರ್ಯಕ್ರಮಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಅಂಶವಾಗಿದೆ ಎಂದರು. ಮುಖ್ಯ ಶಿಕ್ಷಕ ಎ.ಸಿ. ಮಂಜುನಾಥ್ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದವರು ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದರು.

ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ನಾಗೇಶ್ ಮಾತನಾಡಿ, ವಿದ್ಯಾರ್ಥಿ ಗಳು ತಮಗೆ ಸಿಗುವ ವೇದಿಕೆಗಳನ್ನು ಸರಿಯಾಗಿ ಬಳಸಿಕೊಂಡು ತಮ್ಮಲ್ಲಿ ಅಡಗಿರುವ ಪ್ರತಿಭೆ ಅನಾವರಣ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಸಾಹಿತ್ಯ ಪರಿಷತ್ತು ಕಾರ್ಯದರ್ಶಿಗಳಾದ ಎಸ್. ನಾಗರಾಜ್, ಟಿ.ವಿ. ಶೈಲಾ, ಕೋಶಾಧಿಕಾರಿ ಕೆ.ವಿ. ಉಮೇಶ್, ನಿರ್ದೇಶಕರಾದ ಬಿ.ಬಿ. ಹೇಮಾಲತಾ, ಡಿ.ಆರ್. ಸೋಮಶೇಖರ್ ಇದ್ದರು.