ಮಡಿಕೇರಿ, ಆ. ೧೭: ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆ ವತಿಯಿಂದ ಮಾಜಿ ಮುಖ್ಯಮಂತ್ರಿ ದಿ.ಡಿ. ದೇವರಾಜ ಅರಸು ಅವರ ೧೦೯ನೇ ಜನ್ಮದಿನಾಚರಣೆ ಅಂಗವಾಗಿ ತಾ. ೨೦ ರಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಹಿಂದ ಒಕ್ಕೂಟ ಸ್ಥಾಪಕಾಧ್ಯಕ್ಷ, ಸಹಮತ ವೇದಿಕೆ ಅಧ್ಯಕ್ಷ ಟಿ.ಪಿ. ರಮೇಶ್ ಮಾಹಿತಿ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ ೨ ಗಂಟೆಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದು, ವೀರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸಾಧಕರನ್ನು, ಸಾಮಾಜಿಕ ಸೇವಕರನ್ನು ಸನ್ಮಾನಿಸಲಿದ್ದಾರೆ. ಅರಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ನ ಕಾರ್ಯದರ್ಶಿ ಡಾ. ಎಂ.ಜಿ. ಅರಸ್ ಮುಖ್ಯ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ. ಮುದ್ದಯ್ಯ, ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ. ಸುಭಾಷ್ ನಾಣಯ್ಯ, ರಾಜ್ಯ ಅಹಿಂದ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಕೆ.ಬಿ. ಶಾಂತಪ್ಪ, ನಗರಸಭಾ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್, ವಕೀಲ ಬಿ.ಇ. ಜಯೇಂದ್ರ, ವಕ್ಫ್ ಮಾಜಿ ಅಧ್ಯಕ್ಷ ಕೆ.ಎ. ಯಾಕೂಬ್, ಅಬ್ದುಲ್ ರೆಹಮಾನ್ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಇದೇ ಸಂದರ್ಭ ದಸಂಸ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ಸ್ಕೌಟ್, ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ಪೊಲೀಸ್ ಪೇದೆ, ರಕ್ತದಾನಿ ಬಿ.ಎಂ. ರಾಮಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಸೋಮವಾರಪೇಟೆ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎ. ಆದಂ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ. ಲತೀಫ್, ವಕೀಲ ಕೆ.ವಿ. ಸುನಿಲ್, ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷೆ ಚಳಿಯಂಡ ಕಮಲ ಉತ್ತಯ್ಯ ಸೇರಿದಂತೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಿ.ಬಿ. ಬೆಸಿಲ್, ಕೆ.ಆರ್. ಬಬಿತಾ ಅವರುಗಳನ್ನು ಸನ್ಮಾನಿಸಲಾಗುವುದು ಎಂದರು.
ಸಿ-ಡಿ ಲ್ಯಾಂಡ್ ಅನ್ನು ಸ್ವಾಧೀನ ಮಾಡಿಕೊಂಡು ಅರಣ್ಯವಾಗಿ ಪರಿವರ್ತಿಸುವ ಕ್ರಮವನ್ನು ಖಂಡಿಸಿದ ಟಿ.ಪಿ. ರಮೇಶ್, ಹಲವು ವರ್ಷಗಳಿಂದ ಬಡವರು ಮನೆ ನಿರ್ಮಿಸಿಕೊಂಡು, ಕೃಷಿ ಮಾಡಿಕೊಂಡ ಜಾಗವನ್ನು ಸರಕಾರ ಹಿಂಪಡೆಯುತ್ತಿರುವುದು ಸರಿಯಲ್ಲ. ಈ ಬಗ್ಗೆ ಶಾಸಕರು ಗಂಭೀರವಾಗಿ ಪರಿಗಣಿಸಿ ಸರಕಾರದ ಗಮನ ಸೆಳೆಯಬೇಕೆಂದ ಅವರು, ಶಿಥಿಲಗೊಂಡ ಮನೆ ಹಾನಿ ಪ್ರಕರಣಗಳಿಗೆ ಅದೇ ಗ್ರಾಮದ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಿಕೊಡಬೇಕೆಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಟಿ.ಎಂ. ಮುದ್ದಯ್ಯ, ಕಾರ್ಯಾಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯು, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಕಾರ್ಯದರ್ಶಿ ಆರ್.ಕೆ. ಚಂದ್ರಶೇಖರ್ ಹಾಜರಿದ್ದರು.