ಮಡಿಕೇರಿ ಆ. ೧೭: ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆಯು ಮುಂದುವರೆದಿದ್ದು, ಈ ದಿಸೆಯಲ್ಲಿ ಆಗಸ್ಟ್ ಅಂತ್ಯದವರೆಗೂ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.

ವೀಡಿಯೋ ಸಂವಾದ ಮೂಲಕ ಅಧಿಕಾರಿಗಳ ಜತೆ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಭೂ ಕುಸಿತ ಹಾಗೂ ಪ್ರವಾಹಪೀಡಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರ ವಹಿಸಬೇಕು. ಈಗ ಮಳೆ ಕಡಿಮೆ ಆಗಿದ್ದರೂ ಸಹ ಮುಂದಿನ ದಿನಗಳಲ್ಲಿ ಉತ್ತಮ ಮಳೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಭಾರತೀಯ ಹವಾಮಾನ ಇಲಾಖೆ ಕಾಲಾಕಾಲಕ್ಕೆ ಹೊರಡಿಸುವ ಮಾಹಿತಿಯಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.

ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಬೇಕು. ನೋಡಲ್ ಅಧಿಕಾರಿಗಳು, ವಿವಿಧ ವಿಭಾಗದ ಇಂಜಿನಿಯರ್‌ಗಳು, ತಾ.ಪಂ. ಇಓಗಳು, ತಹಶೀಲ್ದಾರರು ಹೀಗೆ ಪ್ರತಿಯೊಬ್ಬರೂ ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆ ಸಂದರ್ಭ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ನೀರಾವರಿ ಇಲಾಖೆ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚುವ ಬಗ್ಗೆ ಸುದೀರ್ಘ ಚರ್ಚೆ ಆಗಿದ್ದು, ಈ ಬಗ್ಗೆ ತ್ವರಿತ ಕ್ರಮ ವಹಿಸುವಂತೆ ಇಂಜಿನಿಯರ್‌ಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ರಸ್ತೆ ಗುಂಡಿ ಬಿದ್ದಿರುವ ಬಗ್ಗೆ ಹಾಗೂ ರಸ್ತೆಯ ಗುಂಡಿ ಮುಚ್ಚಿರುವ ಸಂಬAಧ ದಿನಾಂಕ ಜೊತೆಗೆ, ಜಿ.ಪಿ.ಎಸ್. ಛಾಯಾಚಿತ್ರ ಸಹಿತ ಮಾಹಿತಿ ಒದಗಿಸಬೇಕು. ಈ ಬಗ್ಗೆ ಆಯಾಯ ತಾಲೂಕಿನ ತಹಶೀಲ್ದಾರರು ಗಮನಿಸಬೇಕು. ಹಣವನ್ನು ಸಂಬAಧಪಟ್ಟ ಇಂಜಿನಿಯರಿAಗ್ ಇಲಾಖೆಗೆ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಶಾಲೆಗಳ ಮೇಲ್ಛಾವಣಿ ಸ್ಥಿತಿಗತಿ ಬಗ್ಗೆ ಗಮನಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸಲಹೆ ಮಾಡಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿ.ಇ.ಓ. ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ವಿವಿಧ ಇಲಾಖೆ ಅಧಿಕಾರಿಗಳು, ಇಂಜಿನಿಯರ್‌ಗಳು, ತಾ.ಪಂ. ಇಓಗಳು, ತಹಶೀಲ್ದಾರರು, ಪೌರಾಯುಕ್ತರು ಇದ್ದರು.