ಮಡಿಕೇರಿ, ಆ.೨೦: ರಾಜ್ಯದ ಬಡವರು, ನಿರ್ಗತಿಕರು, ಅಲೆಮಾರಿಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದ ಡಿ.ದೇವರಾಜ ಅರಸು ಅವರು ವಿನೂತನ ಹಾಗೂ ವಿಶಿಷ್ಟ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಪರಿವರ್ತನೆಯ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ೧೦೯ ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿ ನಿಲಯಗಳ ಆರಂಭ, ಭಾಗ್ಯ ಜ್ಯೋತಿ, ಹಿಂದುಳಿದ ವರ್ಗಗಳಿಗೆ ಭೂಮಿ ಹಂಚಿಕೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆಗೆ ದೇವರಾಜ ಅರಸು ಶ್ರಮಿಸಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಕೆ.ಆರ್.ಭಾರತಿ ಅವರು ಮಾತನಾಡಿ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ.
ಹಾವನೂರು ಆಯೋಗ ರಚಿಸುವ ಮೂಲಕ ಎಲ್ಲಾ ವರ್ಗಗಳಿಗೂ ಮೀಸಲಾತಿ ತಲುಪಿಸಲು ಪ್ರಯತ್ನಿಸಿದರು. ಸಹಕಾರ ಸಂಘಗಳ ಸ್ಥಾಪನೆ, ಬೆಂಗಳೂರಿನಲ್ಲಿ ಎಲೆಕ್ಟಾçನಿಕ್ ಸಿಟಿ ಆರಂಭ, ಬೆಂಗಳೂರಿಗೆ ಕಾವೇರಿ ನೀರು ಒದಗಿಸಿದ್ದು, ಕನ್ನಡ ನಾಡು ನುಡಿ ಬಗ್ಗೆ ಅಪಾರ ಅಭಿಮಾನವನ್ನು ಡಿ.ದೇವರಾಜ ಅರಸು ಅವರು ಹೊಂದಿದ್ದರು ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಡಿ.ದೇವರಾಜ ಅರಸು ಅವರ ದೂರದೃಷ್ಟಿ ಹಾಗೂ ದಾರ್ಶನಿಕತ್ವದಿಂದ ಇಂದು ಹಲವರು ಇತರರಂತೆ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ನುಡಿದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಚಿತ್ರಕಲೆ, ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಉತ್ತಮ ನೌಕರರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಹೊನ್ನೇಗೌಡ ಮಾತನಾಡಿದರು.
ಪ್ರಮುಖರಾದ ಮೇದಪ್ಪ, ಕೆ.ಟಿ.ಬೇಬಿ ಮ್ಯಾಥ್ಯೂ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೌರಾಯುಕ್ತರಾದ ವಿಜಯ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಮಹಾದೇವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಶಿವಶಂಕರ ಇತರರು ಇದ್ದರು.
ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್ ಸ್ವಾಗತಿಸಿ, ನಿರೂಪಿಸಿದರು. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕಾಶ್ ವಂದಿಸಿದರು.