ಮುಲಾಜಿಲ್ಲದೆ ಕುಮಾರಸ್ವಾಮಿ ಬಂಧನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ. ೨೧: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ ಎಂದು ಹೇಳಿದರು. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬAಧಪಟ್ಟAತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ ಎಂದರು.

ರಾಜ್ಯಪಾಲರಿಗೆ ಭದ್ರತೆ ಹೆಚ್ಚಳ: ಬುಲೆಟ್ ಪ್ರೊಫ್ ಕಾರು

ಬೆಂಗಳೂರು, ಆ. ೨೧: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೊಟ್ಟಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರಿಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ತನಿಖೆಗೆ ಅನುಮತಿ ಬೆನ್ನಲೇ ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯಪಾಲರು ತೆರಳುವ ಮಾರ್ಗದಲ್ಲಿ ಅವರಿಗೆ ಪ್ರತಿಭಟನೆ ಬಿಸಿತಟ್ಟುವ ಸಾಧ್ಯತೆಯಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ಸಿಕ್ಕಿದ್ದು ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೇ ಬುಲೆಟ್ ಪ್ರೊಫ್ ಕಾರನ್ನು ನೀಡಲಾಗಿದೆ. ಭದ್ರತಾ ದೃಷ್ಟಿಯಿಂದ ರಾಜ್ಯಪಾಲರ ಕೆಲವಾರು ಕಾರ್ಯಕ್ರಮ ರದ್ದುಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಹುಟ್ಟಿ ಬರಬೇಕು - ಹೆಚ್.ಡಿ.ಕೆ.

ಬೆಂಗಳೂರು, ಆ. ೨೧: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಹುಟ್ಟಿ ಬರಬೇಕು ಎಂದು ಹೇಳಿದ್ದಾರೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪೆನಿಗೆ ನಿಯಮ ಉಲ್ಲಂಘಿಸಿ ಗಣಿಗಾರಿಕೆ ಗುತ್ತಿಗೆ ಮುಂಜೂರು ಮಾಡಿದ್ದ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ದೋಷಾರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆ ನಡೆಸುತ್ತಿರುವ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವರು, ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಕರ್ನಾಟಕ ಲೋಕಾಯುಕ್ತದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಹೆದರುವುದಿಲ್ಲ. ತಮ್ಮ ವಿರುದ್ಧದ ತನಿಖೆ ಪೂರ್ಣಗೊಂಡಿದ್ದರೆ, ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್‌ಐಟಿ) ವರದಿಯನ್ನು ಸುಪ್ರೀಂಕೋರ್ಟ್ಗೆ ಏಕೆ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದರು.

ಸ್ಫೋಟ: ಮೂವರು ಸಾವು-೨೫ ಮಂದಿಗೆ ಗಾಯ

ಅನಕಪಲ್ಲಿ, ಆ. ೨೧: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಫಾರ್ಮಾ ಕಂಪನಿಯೊAದರಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಕನಿಷ್ಟ ಮೂವರು ಸಾವನ್ನಪ್ಪಿ ೨೫ ಮಂದಿ ಗಾಯಗೊಂಡಿದ್ದಾರೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಈ ವೇಳೆ ಹೆಚ್ಚಿನ ಕಾರ್ಮಿಕರು ಹೊರಗಿದ್ದರು. ಹೀಗಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಗಾಯಾಳುಗಳನ್ನು ಎನ್‌ಟಿಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾರ್ಮಿಕ, ಕೈಗಾರಿಕಾ ಸಚಿವ ವಾಸಮಶೆಟ್ಟಿ ಸುಭಾಷ್ ಅವರು, ಕಾರ್ಖಾನೆಯಲ್ಲಿನ ದಟ್ಟ ಹೊಗೆಯಿಂದಾಗಿ, ಇಲ್ಲಿಯವರೆಗೆ ಮೂವರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿಗಳಲ್ಲಿ ಒಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಸಚಿವರು ಹೇಳಿದ್ದಾರೆ. ಕಾರ್ಖಾನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆಯೇ ಅಥವಾ ಅಗ್ನಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಸ್ಫೋಟ ಸಂಭವಿಸಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.