ಸಿದ್ದಾಪುರ, ಆ. ೨೧: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂ ರುದ್ರಭೂಮಿಗೆ ಜಾಗವನ್ನು ಒದಗಿಸಿಕೊಡಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ವತಿಯಿಂದ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡ ಭರತ್, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದು ರುದ್ರಭೂಮಿಗೆ ಸರಿಯಾದ ಜಾಗವಿಲ್ಲದೆ ಸಮಸ್ಯೆ ಎದುರಾಗಿದೆ. ಕೂಡಲೇ ಕಂದಾಯ ಇಲಾಖೆ ಅಧಿಕಾರಿಗಳು ಗುರುತಿ ಸಿರುವ ಜಾಗವನ್ನು ವಶಕ್ಕೆ ಪಡೆದು ಕೊಳ್ಳಬೇಕೆಂದು ಒತ್ತಾಯಿಸಿದರು. ಇರುವ ರುದ್ರಭೂಮಿಯು ನದಿ ತೀರದಲ್ಲಿದ್ದು ಮಳೆಗಾಲ ಸಂದರ್ಭದಲ್ಲಿ ಸ್ಮಶಾನಕ್ಕೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ರುದ್ರಭೂಮಿಗೆ ಜಾಗವನ್ನು ಗುರುತಿಸಿ ಸಮಸ್ಯೆಯನ್ನು ಬಗೆಹರಿಸ ಬೇಕೆಂದು ಭರತ್ ಒತ್ತಾಯಿಸಿದರು. ನಂತರ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೆ ಪ್ರಮೀಳಾ ಹಾಗೂ ಗ್ರಾಮ ಆಡಳಿತ ಅಧಿಕಾರಿ ಸಚಿನ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಪದಾಧಿಕಾರಿಗಳಾದ ಉದಯ್ ಕುಮಾರ್, ಮೋನಪ್ಪ, ರವಿ, ಕಾವೇರಿ, ಚಂದ್ರನ್, ವಿಜು, ಸಂತೋಷ್ ಇನ್ನಿತರರು ಹಾಜರಿದ್ದರು.