ಸಿದ್ದಾಪುರ, ಆ. ೨೨: ಕಾಡಾನೆ ದಾಳಿಗೆ ಸಿಲುಕಿ ಕಾಫಿ ಬೆಳೆಗಾರರೊಬ್ಬರು. ಗಂಭೀರ ಗಾಯಗೊಂಡಿರುವ ಘಟನೆ ಪುಲಿಯೇರಿ ಗ್ರಾಮದಲ್ಲಿ ಸಂಭವಿಸಿದೆ.
ಅಮ್ಮತ್ತಿ ಸಮೀಪದ ಪುಲಿಯೇರಿ ಗ್ರಾಮ ನಿವಾಸಿ ಬಿ.ಯು. ನಾಚಪ್ಪ (೭೪) ಎಂಬವರು ತಮ್ಮ ಕಾಫಿತೋಟಕ್ಕೆ ಬೆಳಿಗ್ಗೆ ೧೦ ಗಂಟೆಗೆ ತೆರಳಿ ಹಿಂತಿರುಗಿ ಬರುವ ಸಂದರ್ಭ ಕಾಫಿ ತೋಟದೊಳಗಿನಿಂದ ಕಾಡಾನೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ನಾಚಪ್ಪನವರ ಸೊಂಟ ಹಾಗೂ ತಲೆಗೆ ಗಂಭೀರ ಗಾಯವಾಗಿದೆ. ಸ್ಥಳೀಯರು ಕೂಡಲೇ ಅಮ್ಮತ್ತಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದರು. ಸ್ಥಳಕ್ಕೆ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಮ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಕೇತ್ ಭೇಟಿ
ಕಾಡಾನೆ ದಾಳಿಯ ವಿಷಯ ತಿಳಿಯುತ್ತಿದ್ದಂತೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅಮ್ಮತ್ತಿ ಆಸ್ಪತ್ರೆಗೆ ತೆರಳಿ ಕುಟುಂಬಸ್ಥರಿAದ ಮಾಹಿತಿ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಕಲ್ಪಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಗಾಯಾಳು ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಆಸ್ಪತ್ರೆಯಲ್ಲಿ ಜಮಾವಣೆಗೊಂಡಿದ್ದ ಗ್ರಾಮಸ್ಥರ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಕಾಫಿತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು ನಿರಂತರವಾಗಿ ಮಾನವನ ಮೇಲೆ ದಾಳಿ ನಡೆಸುತ್ತಿವೆ. ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಆನೆಯನ್ನು ಓಡಿಸುವ ಕಾರ್ಯಾಚರಣೆಯಿಂದ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದರು. ಸಂಕೇತ್ ಪೂವಯ್ಯ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸಮಾಧಾನಪಡಿಸಿ, ಮೊದಲಿಗೆ ಗಾಯಾಳುವನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡೋಣ, ಚಿಕಿತ್ಸೆಗೆ ಬೇಕಾದ ವ್ಯವಸ್ಥೆಯನ್ನು ಅರಣ್ಯ ಇಲಾಖೆ ಸಂಪೂರ್ಣವಾಗಿ ನೋಡಿಕೊಳ್ಳಬೇಕಿದೆ ಎಂದು ಗಾಯಾಳುವನ್ನು ಆ್ಯಂಬ್ಯುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.