ಕುಶಾಲನಗರ, ಆ. ೨೩: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಹರಿಕಾರರಾಗಿದ್ದರು. ಅವರನ್ನು ಸ್ಮರಿಸುವುದು ಎಲ್ಲರ ಹೊಣೆಯಾಗಿದೆ ಎಂದು ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಡೆದ ಅರಸು ಅವರ ೧೦೯ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಶಿಕ್ಷಕ ಊ ರಾ ನಾಗೇಶ್, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಕಾರ್ಯಕ್ರಮಕ್ಕೆ ಮುನ್ನ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭ ಏರ್ಪಡಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.