ಮುಳ್ಳೂರು, ಆ. ೨೫: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಶಾಲಾ ವಿಭಾಗದ ಶನಿವಾರಸಂತೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಗುರುವಾರ ಹಾಕಿ ಪಂದ್ಯಾವಳಿ ಮೂಲಕ ಚಾಲನೆ ನೀಡಲಾಯಿತು. ಶನಿವಾರಸಂತೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಬಾಲಕರ ವಿಭಾಗದ ಹಾಕಿ ಪಂದ್ಯಾವಳಿ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಡಿ. ಸುಜಲಾದೇವಿ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಿ ತಂಡಗಳಿಗೆ ಶುಭ ಹಾರೈಸಿದರು.

ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಟಿ.ವಿಶ್ವನಾಥ್ ಮಾತನಾಡಿ, ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗುತ್ತದೆ ಈ ಉದ್ದೇಶದಿಂದ ಸರಕಾರ ಮತ್ತು ಶಿಕ್ಷಣ ಇಲಾಖೆ ಪ್ರತಿವರ್ಷ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳುತ್ತದೆ ಈ ಮೂಲಕ ವಲಯ, ತಾಲೂಕು, ಜಿಲ್ಲೆ, ರಾಜ್ಯ, ಅಂತರ್ ರಾಜ್ಯ ಮಟ್ಟದ ಕ್ರೀಡಾಕೂಟಗಳನ್ನು ನಡೆಸಲಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕ್ರೀಡೆಯಲ್ಲಿರುವ ಗೆಲವು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸುವಂತೆ ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು. ಈ ಸಂದರ್ಭ ಶನಿವಾರಸಂತೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್, ವಲಯ ಕ್ರೀಡಾ ಕಾರ್ಯದರ್ಶಿ ಕೆ.ಪಿ. ಸುನಂದ, ವಿವಿಧ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಪವನ್‌ಕುಮಾರ್, ಸುನಂದ, ಭಾಸ್ಕರ್, ರಾಜೇಶ್, ರಂಗಸ್ವಾಮಿ, ಆದರ್ಶ ಹಾಗೂ ವಿವಿಧ ಶಾಲಾ ತಂಡಗಳ ವ್ಯವಸ್ಥಾಪಕರು ಹಾಜರಿದ್ದರು.