ಮಡಿಕೇರಿ, ಆ. ೨೫: ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ರಾಶಿ ರಾಶಿ ತ್ಯಾಜ್ಯವನ್ನು ಕಳೆದ ಅನೇಕ ವರ್ಷಗಳಿಂದ ಜ್ಯೋತಿ ನಗರದ ಸ್ಟೋನ್ ಹಿಲ್ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಸುರಿಯಲಾಗುತ್ತಿದೆ. ಇದು ಮುಂದೊAದು ದಿನ ನಗರಕ್ಕೆ ಅಪಾಯವನ್ನು ತಂದೊಡ್ಡಲಿದ್ದು, ನಗರಸಭೆ ತಕ್ಷಣ ಎಚ್ಚೆತ್ತುಕೊಂಡು ಜನವಸತಿಯಿಲ್ಲದ ಪ್ರದೇಶದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ನಗರದ ನಿವಾಸಿ ಹೆಚ್.ಎಂ. ಕೃಷ್ಣ ಒತ್ತಾಯಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಪುರಸಭೆಯಾಗಿದ್ದ ಮಡಿಕೇರಿ ನಗರಸಭೆಯಾಗಿ ಮೇಲ್ದರ್ಜೆಗೇರಿದರೂ ಇಲ್ಲಿಯವರೆಗೆ ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗಿಲ್ಲ. ನಗರದಲ್ಲಿ ಸಂಗ್ರಹವಾಗುವ ಟನ್‌ಗಟ್ಟಲೆ ಕಸವನ್ನು ಕುಡಿಯುವ ನೀರಿನ ಟ್ಯಾಂಕ್ ಇರುವ ಸ್ಟೋನ್ ಹಿಲ್ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಇದು ಸುತ್ತಲಿನ ಪರಿಸರವನ್ನು ಕಲುಷಿತಗೊಳಿಸಿದೆಯಲ್ಲದೆ, ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ ಎಂದರು.