ಸೋಮವಾರಪೇಟೆ,ಆ.೨೫: ತಾಲೂಕಿನ ಯಡವನಾಡು ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಮೂರು ಬಾರಿ ಹುಲಿ ಕಾಣಿಸಿಕೊಂಡಿದ್ದು, ಕಾಫಿ ತೋಟದೊಳಗೆ ಸಂಚರಿಸುತ್ತಿದೆ. ಅರಣ್ಯಕ್ಕೆ ಒತ್ತಿಕೊಂಡಿರುವ ತೋಟಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರೊಂದಿಗೆ ತೋಟದೊಳಗೆ ಮನೆಗಳಿದ್ದು, ನಿರ್ಭಯವಾಗಿ ತಿರುಗಾಡಲೂ ಭಯವಾಗುತ್ತಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ. ತೋಟದಿಂದ ತೋಟಕ್ಕೆ ಸಂಚರಿಸುತ್ತಿರುವ ಹುಲಿಯನ್ನು ನೋಡಿರುವ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇಲಾಖೆಯ ಸಿಬ್ಬಂದಿಗಳು ಬೇಜವಾಬ್ದಾರಿಯ ಉತ್ತರ ನೀಡುತ್ತಿದ್ದಾರೆ. ತಕ್ಷಣ ಹುಲಿಯ ಚಲನ ವಲನ ಗಮನಿಸಿ ಸೆರೆಹಿಡಿಯಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಮಹಿಳೆಯರು, ಶಾಲಾ ಕಾಲೇಜಿಗೆ ತೆರಳುವ ಮಕ್ಕಳು, ವಯೋವೃದ್ಧರು ಓಡಾಡಲು ಭಯಪಡುವ ಸನ್ನಿವೇಶ ನಿರ್ಮಾಣವಾಗಿದೆ. ತೋಟದಲ್ಲಿ ಕೆಲಸ ಮಾಡಲು ಹಿಂದೇಟು ಹಾಕುವಂತಾಗಿದೆ. ಅರಣ್ಯ ಇಲಾಖಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.