ಕುಶಾಲನಗರ, ಆ. ೨೬: ಮೈಸೂರಿನ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ಹನ್ನೆರಡನೇ ಶತಮಾನದ ಶರಣರ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಉದ್ದೀಪನಗೊಳಿಸುವ ದಿಸೆಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸಂಸ್ಥೆಯನ್ನು ಕಟ್ಟಿದ ಡಾ.ರಾಜೇಂದ್ರ ಸ್ವಾಮೀಜಿ ಸ್ಮರಣಾರ್ಥ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನವಾಗಿ ಆಗಸ್ಟ್ ೨೯ ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಆಚರಿಸಲಾಗುತ್ತಿದೆ.
ಹಾಗೆಯೇ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜೇಂದ್ರ ಸ್ವಾಮೀಜಿ ಸ್ಮರಣೆ ಹಾಗೂ ಶಸಾಪ ಸಂಸ್ಥಾಪನಾ ಕಾರ್ಯಕ್ರಮವೂ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಶಸಾಪದ ಗೌರವಾಧ್ಯಕ್ಷರೂ ಆಗಿರುವ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ.
ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಉದ್ಘಾಟಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಶ್ರೀ ರಾಜೇಂದ್ರ ಸ್ವಾಮೀಜಿ ಅವರ ಕುರಿತು ಮಾತನಾಡಲಿದ್ದಾರೆ.
ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಕೆ.ಎಸ್. ಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಹಾರಂಗಿ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಕೆ.ಕೆ. ರಘುಪತಿ, ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್, ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಜಲಜಾ ಶೇಖರ್, ಕುಶಾಲನಗರ ತಾಲೂಕು ಅಧ್ಯಕ್ಷೆ ಹೇಮಲತಾ, ಶಸಾಪ. ತಾಲೂಕು ಅಧ್ಯಕ್ಷ. ಎಂ.ಎಸ್. ಶಿವಾನಂದ ಆಗಮಿಸಲಿದ್ದಾರೆ ಎಂದು ಶಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ತಿಳಿಸಿದ್ದಾರೆ.