ಕೋವರ್ ಕೊಲ್ಲಿ ಇಂದ್ರೇಶ್

ನವದೆಹಲಿ, ಆ. ೨೭: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ರಂಗ ಸಮುದ್ರ ಮೂಲದ ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳೂ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು.

ಇದನ್ನು ಮೃತ ಗಣಪತಿ ಅವರ ಸಹೋದರಿ ಸಬೀತಾ ಅವರು ಹೈ ಕೋರ್ಟ್ನಲ್ಲಿ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಬಳಿಕ ಹೈಕೋರ್ಟ್ ಸಹ ಜಾರ್ಜ್ ಅವರ ಪಾತ್ರವಿಲ್ಲ ಎಂದು ತೀರ್ಪು ನೀಡಿತ್ತು. ಮತ್ತೆ ಇದನ್ನು ಪ್ರಶ್ನಿಸಿ ಸಬೀತಾ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇದರೊಂದಿಗೆ ಸಬೀತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

ಮಂಗಳೂರಿನ ಐಜಿಪಿ ಕಚೇರಿಯಲ್ಲಿ ಸೇವೆ ಸಲ್ಲಿಸುತಿದ್ದ ಗಣಪತಿ ಅವರು ಜುಲೈ ೧೬, ೨೦೧೬ ರಂದು ಮಡಿಕೇರಿಯ ವಿನಾಯಕ ಲಾಡ್ಜ್ನ ರೂಂ ನಂಬರ್ ೩೧೫ ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೂ ಮುನ್ನ ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ ಅವರು, ಅಂದಿನ ಗೃಹ ಸಚಿವ ಕೆ.ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ. ಎಂ. ಪ್ರಸಾದ್ ತಮಗೆ ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಹೇಳಿದ್ದರು.

ನಂತರ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು. ಆದರೆ ಇದನ್ನು ಗಣಪತಿ ಕುಟುಂಬಸ್ಥರು ಸಿಬಿಐ ತನಿಖೆಗೆ ಒತ್ತಾಯಿಸಿ ಹೈ ಕೋರ್ಟಿನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸಿಬಿಐ ನಿಂದ ತನಿಖೆ ಮಾಡಿಸಲು ಆದೇಶ ಪಡೆಯುವಲ್ಲಿ ಸಫಲರಾಗಿದ್ದರು. ಆದರೆ ಈ ಪ್ರಕರಣಕ್ಕೆ ಸಂಬAಧಿಸಿದAತೆ ಈ ಹಿಂದೆ ತನಿಖೆ ನಡೆಸಿದ್ದ ಸಿಬಿಐ / ಸಿಐಡಿ ತನಿಖಾ ತಂಡಗಳು ಪೊಲೀಸ್ ಅಧಿಕಾರಿಗಳ ಅಥವಾ ಜಾರ್ಜ್ ಅವರ ಪಾತ್ರ ಇಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿದ್ದವು.

ಇದನ್ನು ಪ್ರಶ್ನಿಸಿ ಗಣಪತಿ ಅವರ ಸಹೋದರಿ ಸಬೀತಾ ಮೊದಲು ಹೈ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಅದು ತಿರಸ್ಕೃತಗೊಂಡ ಬಳಿಕ ತೀರ್ಪನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಸರ್ವೋಚ್ಚ ನ್ಯಾಯಾಲಯವೂ ಅರ್ಜಿಯನ್ನು ವಜಾ ಮಾಡಿರುವುದರಿಂದ ಸುಮಾರು ೮ ವರ್ಷಗಳ ಕಾನೂನು ಹೋರಾಟಕ್ಕೆ ತೆರೆ ಬಿದ್ದಂತಾಗಿದೆ.