ಮಡಿಕೇರಿ, ಸೆ. ೧೧: ನಗರದಲ್ಲಿ ಕೆಎಸ್ಆರ್ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.
ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ ವತಿಯಿಂದ ಶನಿವಾರಸಂತೆಯಲ್ಲಿ ೧.೫ ಕೋಟಿ ರೂ. ವೆಚ್ಚದ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈಗಾಗಲೇ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಘಟಕವಿದೆ. ಜೊತೆಗೆ ಕುಶಾಲನಗರದಲ್ಲಿ ನೂತನ ಬಸ್ ಘಟಕ ನಿರ್ಮಾಣವಾಗುತ್ತಿದೆ. ಈ ಎರಡು ಘಟಕಕ್ಕೆ ವಿಭಾಗೀಯ ಕಚೇರಿ ಆರಂಭಿಸಲು ಕಷ್ಟಸಾಧ್ಯ. ಹಾಗಾಗಿ ಹತ್ತಿರದ ರಾಮನಾಥಪುರ, ಇತರ ಒಟ್ಟು ೪ ಘಟಕಗಳನ್ನು ಒಳಗೊಂಡು ಒಂದು ವಿಭಾಗೀಯ ಕಚೇರಿ ಆರಂಭಿಸಬೇಕು. ಆ ನಿಟ್ಟಿನಲ್ಲಿ ಆದ್ಯತೆ ಮೇಲೆ ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದರು.
ಸರ್ಕಾರದ ಶಕ್ತಿ ಯೋಜನೆ ನಂತರ ಕರ್ನಾಟಕ ಸಾರಿಗೆ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಮತ್ತು ಸುಧಾರಣೆಯಾಗಿದೆ. ಪ್ರತಿನಿತ್ಯ ಸಾವಿರಾರು ಮಹಿಳೆಯರು ಬಸ್ನಲ್ಲಿ ಸಂಚರಿಸುತ್ತಿದ್ದಾರೆ.
ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆಯು ಹೆಚ್ಚಾಗಿದೆ. ೪೫೦೦ ಹೊಸ ಬಸ್ಗಳನ್ನು ಸಹ ಖರೀದಿಸಲಾಗಿದೆ. ಜೊತೆಗೆ ಚಾಲಕ, ನಿರ್ವಾಹಕ ಸೇರಿದಂತೆ ೯ ಸಾವಿರ ಉದ್ಯೋಗಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾ.೧೨ ರಂದು (ಇಂದು) ಬೆಂಗಳೂರಿನಲ್ಲಿ ಹೊಸ ಬಸ್ಗಳ ಸಂಚಾರ
(ಮೊದಲ ಪುಟದಿಂದ) ಸೇರಿದಂತೆ ಸಾರಿಗೆ ಇಲಾಖೆಯ ವಿವಿಧ ಕಾರ್ಯ ಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಜಿಲ್ಲೆಯ ಕೊಡ್ಲಿಪೇಟೆಯಲ್ಲೂ ನೂತನ ಬಸ್ ನಿಲ್ದಾಣ ನಿರ್ಮಿಸ ಲಾಗುವುದು. ಹಾಗೆಯೇ ಖಾಸಗಿ ಬಸ್ ಮಾಲೀಕರ ಸಮಸ್ಯೆಯನ್ನು ಸಹ ಕೇಳಲಾಗಿದೆ. ಒಟ್ಟಾರೆ ಜಿಲ್ಲೆಯ ಜನರ ಸುಗಮ ಸಾರಿಗೆ ಸಂಚಾರಕ್ಕೆ ಎಲ್ಲಾ ರೀತಿಯ ಕ್ರಮವಹಿಸಲಾಗುವುದು ಎಂದು ಸಚಿವರು ನುಡಿದರು. ಜಿಲ್ಲೆಯಲ್ಲಿ ಹೊಸ ಬಸ್ ಮಾರ್ಗಕ್ಕೂ ಸಹ ಅಗತ್ಯ ಕ್ರಮವಹಿಸಲಾಗುವುದು ಎಂದು ಹೇಳಿದರು.
ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಜಿಲ್ಲೆಯ ಶನಿವಾರಸಂತೆ ಭಾಗದಲ್ಲಿ ಹಲವು ದಶಕಗಳಿಂದ ಬಸ್ ನಿಲ್ದಾಣ ಮಾಡಬೇಕು ಎಂಬ ಸಾರ್ವಜನಿಕರ ಒತ್ತಾಯವಾಗಿತ್ತು. ಆ ನಿಟ್ಟಿನಲ್ಲಿ ಈಗ ಕಾಲ ಕೂಡಿಬಂದಿದ್ದು, ಬಸ್ ನಿಲ್ದಾಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕ ಕೆಎಸ್ಆರ್ಟಿಸಿ ವಿಭಾಗೀಯ ಘಟಕ ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಸಚಿವರು ಪ್ರತ್ಯೇಕ ವಿಭಾಗೀಯ ಕಚೇರಿ ಆರಂಭಕ್ಕೆ ಅವಕಾಶ ಮಾಡಬೇಕು. ಪ್ರತ್ಯೇಕ ವಿಭಾಗೀಯ ಘಟಕ ಆರಂಭಿಸುವುದರ ಜೊತೆಗೆ ಬಸ್ಗಳಿಗೆ ಕೆಎ೧೨ ನೋಂದಣಿ ಆಗಬೇಕು.
ಮುಂದಿನ ದಿನಗಳಲ್ಲಿ ಖಾಸಗಿ ಬಸ್ ನಿಲ್ದಾಣಕ್ಕೂ ದುಂಡಳ್ಳಿಯಲ್ಲಿ ಅವಕಾಶ ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಶನಿವಾರಸಂತೆ ಭಾಗದ ಜನರ ಹಲವು ದಶಕಗಳ ಬೇಡಿಕೆಯನ್ನು ಸಚಿವರು ಈಡೇರಿಸಿದ್ದಾರೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ಮಾಣದ ಬಳಿ ಇರುವ ಜಾಗವನ್ನು ಗ್ರಾ.ಪಂ.ಗೆ ನೀಡುವಂತಾಗಬೇಕು. ಇದರಿಂದ ಮಳಿಗೆ ನಿರ್ಮಾಣ ಮಾಡಿ ಗ್ರಾ.ಪಂ. ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಒಳ್ಳೆಯ ಹೆಸರು ಬಂದಿದೆ. ಕುಶಾಲನಗರದಲ್ಲಿ ಕೆಎಸ್ಆರ್ಟಿಸಿ ಘಟಕ ನಿರ್ಮಾಣಕ್ಕೆ ಸಚಿವರು ಕಾರಣರಾಗಿದ್ದಾರೆ.
ಜಿಲ್ಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಹಲವು ದೇವಾಲಯಗಳು ಇದ್ದು, ದೇವಾಲಯಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮುಜರಾಯಿ ಸಚಿವರು ಆದ ರಾಮಲಿಂಗರೆಡ್ಡಿ ಅವರಿಗೆ ಮನವಿ ಮಾಡಿದರು. ಶಕ್ತಿ ಯೋಜನೆ ಆರಂಭದಿAದ ಕೊಡಗು ಜಿಲ್ಲೆಯಲ್ಲಿ ಇದುವರೆಗೆ ೭೦ ಲಕ್ಷ ಮಹಿಳೆಯರು ಸಂಚರಿಸಿದ್ದು, ೨೭ ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಕೆಎಸ್ಆರ್ಟಿಸಿಯು ಇಡೀ ಏಷ್ಯದಲ್ಲಿಯೇ ಮಾದರಿ ಸಾರಿಗೆ ಸಂಸ್ಥೆಯಾಗಿದ್ದು, ಹಲವರಿಗೆ ಉದ್ಯೋಗ ನೀಡಿದೆ. ಜೊತೆಗೆ ಹೆಚ್ಚು ಲಾಭವನ್ನು ಸಹ ಹೊಂದಿದೆ ಎಂದು ತಿಳಿಸಿದರು. ಹೆಚ್ಚಿನ ಜನಸಂಖ್ಯೆ ಹೊಂದಿರುವ ಶನಿವಾರಸಂತೆಯಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಚಾಲನೆ ನೀಡಿರುವುದು ಶ್ಲಾಘನೀಯವಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಸರ್ಕಾರ ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿರುವುದು ಗಮನಾರ್ಹವಾಗಿದೆ. ರಾಜ್ಯದಲ್ಲಿ ಸರ್ಕಾರಿ ಬಸ್ ಸೇವೆ ಉತ್ತಮವಾಗಿದ್ದು, ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ತಿಳಿಸಿದರು.
ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಗೀತಾ ಹರೀಶ್ ಮಾತನಾಡಿ, ಬಹು ದಶಕಗಳ ಬೇಡಿಕೆ ಈಗ ಈಡೇರಿಸಿದಂತಾಗಿದೆ ಎಂದು ಹೇಳಿದರು. ಗ್ರಾ.ಪಂ. ಸದಸ್ಯರಾದ ರಘು ಮಾತನಾಡಿ, ಬಸ್ ನಿಲ್ದಾಣಕ್ಕೆ ಸ್ಥಳ ದೊರೆಯಲು ಹಲವರು ಶ್ರಮಿಸಿದ್ದಾರೆ. ಆ ನಿಟ್ಟಿನಲ್ಲಿ ಹಿಂದಿನ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಅವರನ್ನು ಮರೆಯುವಂತಿಲ್ಲ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಪ್ರಮುಖರಾದ ಕೆ.ಪಿ. ಚಂದ್ರಕಲಾ, ಚಂದ್ರಮೌಳಿ, ಗ್ರಾ.ಪಂ. ಉಪಾಧ್ಯಕ್ಷ ಸರ್ದಾರ್ ಅಹ್ಮದ್, ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಸತ್ಯವತಿ, ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಆಮಲಿಂಗಯ್ಯ ಬಿ.ಹೊಸ ಪೂಜಾರಿ, ಮಡಿಕೇರಿ ಕೆಸ್ಆರ್ಟಿಸಿ ಘಟಕ ವ್ಯವಸ್ಥಾಪಕ ಎಂ.ಎA.ಮೆಹಬೂಬ್ ಅಲಿ ಇತರರು ಇದ್ದರು.