ಕುಶಾಲನಗರ, ಸೆ. ೧೨: ನಿಗದಿತ ಅವಧಿ ಒಳಗೆ ಕುಶಾಲನಗರ ಬಸ್ ಡಿಪೋ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಬಸವನಹಳ್ಳಿ ಬಳಿ ನಿರ್ಮಾಣ ಹಂತದಲ್ಲಿರುವ ಸಾರಿಗೆ ಬಸ್ ಡಿಪೋ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾರಿಗೆ ಸಂಸ್ಥೆ ಮೂಲಕ ರಾಜ್ಯದ ಜನತೆಗೆ ಉತ್ತಮ ಸೇವೆ ಒದಗಿಸುವುದು ನಮ್ಮ ಮುಖ್ಯ ಗುರಿ. ಗ್ಯಾರಂಟಿ ಯೋಜನೆಗಳು ಮುಂದಿನ ೧೦ ವರ್ಷ ಕೂಡ ನಿರಾತಂಕವಾಗಿ ಮುಂದುವರೆಯಲಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಗುಂಡುರಾಯರ ಅವಧಿಯಲ್ಲಿ ಕುಶಾಲನಗರದಲ್ಲಿ ಸಾರಿಗೆ ಬಸ್ ನಿಲ್ದಾಣ ಸ್ಥಾಪಿಸಲಾಗಿತ್ತು. ನಂತರದ ದಿನಗಳಲ್ಲಿ ಡಿಪೋ ಸ್ಥಾಪನೆಗೆ ಪ್ರಮುಖ ಬೇಡಿಕೆ ವ್ಯಕ್ತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಬಸವನಹಳ್ಳಿಯಲ್ಲಿ ೪ ಎಕರೆ ಪ್ರದೇಶದಲ್ಲಿ ೮ ಕೋಟಿ ವೆಚ್ಚದಲ್ಲಿ ಡಿಪೋ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಮುಂದಿನ ವರ್ಷದ ಮಾರ್ಚ್ನಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದರು.
ಜಿಲ್ಲೆಯ ಜನರ ಬೇಡಿಕೆಯಂತೆ ಶಾಸಕ ಡಾ.ಮಂತರ್ ಗೌಡ ಅವರು ಹೆಚ್ಚುವರಿ ಬಸ್ಗಳಿಗೆ ಮನವಿ ಸಲ್ಲಿಸಿದ ಮೇರೆಗೆ ಕೆಲವು ಬಸ್ಗಳನ್ನು ಒದಗಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕುಶಾಲನಗರ ಮೂಲಕ ಮತ್ತಷ್ಟು ಬಸ್ಗಳನ್ನು ಒದಗಿಸಲು ಕ್ರಮವಹಿಸಲಾಗುವುದು ಎಂದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಕೆಲ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಚಿವರಿಗೆ ಸಲ್ಲಿಸಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡುರಾವ್, ನಟೇಶ್ ಗೌಡ, ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಕಾಂಗ್ರೆಸ್ ಪ್ರಮುಖರಾದ ಲೋಕೇಶ್, ಟಿ.ಪಿ. ಹಮೀದ್, ಕಿರಣ್, ಕೃಷ್ಣೇಗೌಡ, ಸುನಿತಾ, ಅರುಣ್ ರಾವ್, ಬಿ.ಡಿ.ಅಣ್ಣಯ್ಯ ಮತ್ತಿತರರು ಇದ್ದರು.