ಮಡಿಕೇರಿ, ಸೆ. ೧೫: ಕೆಲದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಡಿಕೇರಿ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಪ್ರಜ್ವಲ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೂಲತಃ ಹಾಸನದವರಾಗಿದ್ದು, ಗೌಳಿಬೀದಿಯಲ್ಲಿ ನೆಲೆಸಿ ಕಳೆದ ೪ ವರ್ಷಗಳಿಂದ ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಜ್ವಲ್ ಕೆಲದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೆಲಸದ ಒತ್ತಡದಿಂದ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿತ್ತಾದರೂ, ತಹಶೀಲ್ದಾರ್ ಅವರ ಸಹಿಯನ್ನು ನಕಲು ಮಾಡಿರುವುದು ಬಹಿರಂಗಗೊAಡ ಹಿನ್ನೆಲೆಯಲ್ಲಿ ಪ್ರಜ್ವಲ್ ಆತ್ಮಹತ್ಯೆಗೆ ಯತ್ನಿಸಿರುವುದು ವರದಿಯಾಗಿತ್ತು. ಇದು ವಾಸ್ತವಾಂಶವೂ ಆಗಿದೆ ಎಂದು ತಹಶೀಲ್ದಾರ್ ಪ್ರವೀಣ್ ಅವರು ಹೇಳಿಕೆ ನೀಡಿದ್ದರು. ಇದೀಗ ಆಸ್ಪತ್ರೆಗೆ ದಾಖಲಾಗಿದ್ದ ಪ್ರಜ್ವಲ್ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.