ವೀರಾಜಪೇಟೆ, ಸೆ. ೧೫: ಕೊಡಗು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಉದ್ಘಾಟನಾ ಸಮಾರಂಭದ ಪ್ರಯುಕ್ತ, ಕೊಡಗು ಜಿಲ್ಲೆಯ ಕನ್ನಡ ಭಾಷಾ ಬೋಧಕರಿಗೆ "ಕನ್ನಡ ಸಾಹಿತ್ಯದಲ್ಲಿ ಪರಿವರ್ತನೆಯ ಹೆಗ್ಗುರುತುಗಳು" ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ತಾ.೨೨ ರಂದು ಆಯೋಜಿಸಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ಮಾಧ್ಯಮ ಸಲಹೆಗಾರ ಸತೀಶ್ ಕುಮಾರ್ ಟಿ.ಆರ್ ತಿಳಿಸಿದ್ದಾರೆ.
ಮಡಿಕೇರಿಯ ಕೊಹಿನೂರು ರಸ್ತೆಯ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಾಗಾರಕ್ಕೆ ಅಂದು ಬೆಳಿಗ್ಗೆ ೧೦ ಗಂಟೆಗೆ ಚಾಲನೆ ನೀಡಲಾಗುವುದು. ಕಾರ್ಯಾಗಾರವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಸಂಗಪ್ಪ ಆಲೂರ ಉದ್ಘಾಟಿಸಲಿದ್ದು, ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ. ನರೇಂದ್ರ ಕುಮಾರ್ ಭಾಗವಹಿಸಲಿದ್ದಾರೆ. ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಅರ್ಜುನ್ ಮೌರ್ಯ, ದಸಾಪದ ಮೈಸೂರು ವಿಭಾಗೀಯ ಸಂಯೋಜಕ ಡಾ. ಚಂದ್ರಗುಪ್ತ ಮತ್ತಿತರರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ದಿನ ಬೆಳಿಗ್ಗೆ ಸ್ಥಳದಲ್ಲೇ ನೋಂದಣಿ ಮಾಡಿಸಬಹುದು. ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.