ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ
ಬೆಂಗಳೂರು, ಸೆ. ೧೪: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ಶನಿವಾರ ಕೋಲಾರದಲ್ಲಿ ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ಪೊಲೀಸರಿಗೆ ದೂರು ನೀಡಿದ್ದರು. ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರ್.ಆರ್. ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದೆ. ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ ಮಾಡಲಾಗಿದೆ. ನಂತರ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಅವರನ್ನು ಬೆಂಗಳೂರಿಗೆ ಕರೆತರಲಾಯಿತು. ಮುನಿರತ್ನ ಅವರ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗುತ್ತಿಗೆದಾರ ಚೆಲುವರಾಜು ಅವರು ದಾಖಲಿಸಿದ ಮೊದಲ ಎಫ್ಐಆರ್ನಲ್ಲಿ, ಶಾಸಕರು ೩೦ ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಮತ್ತು ಮೊತ್ತವನ್ನು ಪಾವತಿಸದಿದ್ದರೆ ತನ್ನ ಗುತ್ತಿಗೆಯನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತ್ಯ ಸನ್ನಿಹಿತ : ಪ್ರಧಾನಿ ಮೋದಿ
ಜಮ್ಮು, ಸೆ. ೧೪: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯು ಕೊನೆಗಾಣುತ್ತಿದ್ದು, ಅತ್ಯಂತ ಸುಂದರವಾದ ಪ್ರದೇಶವನ್ನು ನಾಶಪಡಿಸಿದ ಕುಟುಂಬ ರಾಜಕಾರಣವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹೊಸ ನಾಯಕತ್ವವನ್ನು ಪರಿಚಯಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಜಮ್ಮು ಪ್ರಾಂತ್ಯದ ಡೋಡಾ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ನಾವು ಹಾಗೂ ನೀವು ಸೇರಿಕೊಂಡು, ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಸಂಪದ್ಭರಿತ ರಾಜ್ಯವನ್ನಾಗಿ ನಿರ್ಮಿಸೋಣ ಎಂದು ಕರೆ ನೀಡಿದರು. ಇದೇ ಸೆ. ೧೮ರಂದು ರಾಜ್ಯ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮೊದಲ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡರು. ಸ್ವಾತಂತ್ರö್ಯ ನಂತರ, ಜಮ್ಮು ಮತ್ತು ಕಾಶ್ಮೀರವು ವಿದೇಶಿ ಶಕ್ತಿಗಳು ಹಾಗೂ ಕುಟುಂಬ ರಾಜಕಾರಣಕ್ಕೆ ಗುರಿಯಾಗಿದ್ದರಿಂದ ಸುಂದರ ಪ್ರದೇಶದ ಒಳಗೆ ನಿರ್ವಾತ ಸೃಷ್ಟಿಸಿತು. ಕುಟುಂಬ ರಾಜಕಾರಣ ನಡೆಸಿದವರು, ಮಕ್ಕಳನ್ನು ಉತ್ತರಾಧಿಕಾರಿಯನ್ನಾಗಿ ಮಾಡಿ, ಹೊಸ ನಾಯಕತ್ವದ ಬೆಳವಣಿಗೆಗೆ ಅವಕಾಶ ನೀಡಲಿಲ್ಲ ಎಂದು ಅಬ್ದುಲ್ಲಾ ಹಾಗೂ ಮುಫ್ತಿ ಕುಟುಂಬದ ವಿರುದ್ಧ ಕಿಡಿಕಾರಿದರು.
ಹಾಲಿನ ಮಾರಾಟ ದರ ಹೆಚ್ಚಳದ ಪ್ರಸ್ತಾಪ
ತುಮಕೂರು, ಸೆ. ೧೪: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್ಗೆ ರೂ. ೫ ಹೆಚ್ಚಳ ಮಾಡುವ ಪ್ರಸ್ತಾಪವಿದ್ದು, ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಶನಿವಾರ ತಿಳಿಸಿದರು. ಹಾಲಿನ ದರ ಹೆಚ್ಚಳ ಮಾಡಿದ ಸಂಪೂರ್ಣ ಹಣವನ್ನು ರೈತರಿಗೆ ವರ್ಗಾಯಿಸಲಾಗುವುದು. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಚರ್ಚಿಸಿದ್ದು, ಬೆಲೆ ಹೆಚ್ಚಳ ಮಾಡಲು ಸಮ್ಮತಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ದೇಶದ ಯಾವುದೇ ರಾಜ್ಯದಲ್ಲೂ ಇಷ್ಟೊಂದು ಕಡಿಮೆ ಬೆಲೆ (ಲೀಟರ್ಗೆ ರೂ. ೩೧) ಹಾಲು ಖರೀದಿಸುತ್ತಿಲ್ಲ. ಇಷ್ಟು ಕಡಿಮೆ ದರಕ್ಕೆ ಯಾವ ರಾಜ್ಯದಲ್ಲೂ ಗ್ರಾಹಕರಿಗೆ ಮಾರಾಟ ಮಾಡುತ್ತಿಲ್ಲ. ನಮ್ಮ ರಾಜ್ಯದಲ್ಲೇ ಅತಿ ಕಡಿಮೆ ಕಡಿಮೆ ಬೆಲೆಗೆ ಹಾಲು ಖರೀದಿಸಲಾಗುತ್ತಿದೆ. ರೈತರಿಗೆ ನೆರವಾಗುವ ದೃಷ್ಟಿಯಿಂದ ಹಾಲು ಖರೀದಿ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಒಂದು ಲೀಟರ್ ಬಾಟಲಿ ನೀರಿನ ಬೆಲೆಗೆ ಸರಿಸಮನಾಗಿ ಹಾಲಿಗೆ ಬೆಲೆ ಸಿಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.