ಮಡಿಕೇರಿ, ಸೆ. ೧೮: ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

ದ.ಸಂ.ಸ. ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಗಾಯತ್ರಿ ನರಸಿಂಹ, ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರ ಇದೆ ಮತ್ತು ಈ ಆದೇಶವನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ನ್ಯಾಯಾಲಯವೇ ಐತಿಹಾಸಿಕ ತೀರ್ಪು ನೀಡಿದೆ. ಪರಿಶಿಷ್ಟ ಜಾತಿಯ ಕೆಲವು ಉಪಜಾತಿಗಳಿಗೆ ಮೀಸಲಾತಿಯ ಪ್ರಯೋಜವನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಇಂತಹ ಉಪಜಾತಿಗಳು ಪ್ರಗತಿ ಸಾಧಿಸದೆ ಹಿಂದುಳಿದಿವೆ. ಇದನ್ನು ಪರಿಗಣಿಸಿ ಮೀಸಲಾತಿ ನೀಡಿದರೆ ಮೀಸಲಾತಿಯ ಲಾಭ ಪಡೆಯಲು ಸಾಧ್ಯವಾಗದ ಸಮುದಾಯಗಳಿಗೆ ಪ್ರಯೋಜವಾಗಬಹುದು ಎಂದು ಅಭಿಪ್ರಾಯಪಟ್ಟರು.

ಮನವಿ ಸಲ್ಲಿಸುವ ಸಂದರ್ಭ ಜಿಲ್ಲಾ ಸಂಘಟನಾ ಸಂಚಾಲಕ ಪಿ. ಬೋಜ, ಸಮಿತಿ ಸಂಚಾಲಕ ಕುಳಿಯ, ಜಿಲ್ಲಾ ಸಂಘಟನಾ ಸಂಚಾಲಕಿ ಭಾನುಮತಿ, ಮಹಿಳಾ ಒಕ್ಕೂಟದ ಮಡಿಕೇರಿ ತಾಲೂಕು ಸಂಚಾಲಕಿ ಗೌರಮ್ಮ, ವೀರಾಜಪೇಟೆ ತಾಲೂಕು ಸಂಚಾಲಕಿ ಮಂಜುಳಾ, ಕೆದಮುಳ್ಳೂರು ಗ್ರಾಮ ಸಂಚಾಲಕ ರಘು, ಸದಸ್ಯರಾದ ಗೋವಿಂದ, ದಿನೇಶ್, ಗಂಗೆ ಮತ್ತಿತರರು ಹಾಜರಿದ್ದರು.