ಮಡಿಕೇರಿ, ಸೆ. ೧೮: ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ಮತ್ತು ಸಾಂಸ್ಕೃತಿಕ, ಕ್ರೀಡಾ ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೊಡಗು ಪ್ರೆಸ್ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ವಿದ್ಯಾರ್ಥಿಗಳು ಶಾಲಾ ಕಾಲೇಜು ಹಂತದಲ್ಲೇ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ಎನ್.ಎಸ್.ಎಸ್., ಎನ್.ಸಿ.ಸಿ.ಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿದ್ದು, ಎಲ್ಲಾ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದರು.
ಕಾಲೇಜಿನ ಉಪನ್ಯಾಸಕ ಎನ್.ಎಸ್. ಚಿದಾನಂದ್ ಪ್ರಾಸ್ತಾವಿಕ ನುಡಿಗಳನ್ನಾಡಿ, ವಿದ್ಯಾರ್ಥಿಗಳಿಗೆ ಕೇವಲ ಓದು ಮಾತ್ರ ಮುಖ್ಯವಾಗಿರದೆ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದರು.
ರಾಜ್ಯದಲ್ಲಿರುವ ೧೨೦೦ ಕಾಲೇಜುಗಳ ಪೈಕಿ ೫೦೦ಕ್ಕೂ ಹೆಚ್ಚು ಕಾಲೇಜುಗಳಲ್ಲಿ ರಾಷ್ಟಿçÃಯ ಸೇವಾ ಯೋಜನೆಯ ಘಟಕಗಳಿವೆ. ಇದರ ಉದ್ದೇಶ ‘ನನಗಲ್ಲ ನಿನಗೆ’ ಎಂದಾಗಿದೆ. ಎನ್.ಎಸ್.ಎಸ್ ಸೇವಾ ಮನೋಭಾವನೆಯನ್ನು ಮೂಡಿಸುತ್ತದೆ ಎಂದು ಹೇಳಿದರು.
ಇದೇ ಸಂದರ್ಭ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಕಾಲೇಜಿನ ಉಪನ್ಯಾಸಕ ಟಿ.ಕೆ ಶಶಿ ಪ್ರತಿಜ್ಞಾ ವಿಧಿ ಬೋಧಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಜನಪದ ಗೀತೆ ಹಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್ ವಿಜಯ್ ಉಪಸ್ಥಿತರಿದ್ದರು.