ಗೋಣಿಕೊಪ್ಪಲು, ಸೆ. ೧೯: ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವವನ್ನು ೨೦೨೪ರ ಫೆಬ್ರವರಿ ಎರಡನೇ ತಾರೀಕಿನಂದು ಅರ್ಥಪೂರ್ಣವಾಗಿ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುವಂತೆ ಆಚರಿಸಲು ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಸಲಹೆ ನೀಡಿದರು.
ಗೋಣಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆಯಲ್ಲಿ ಮಾತನಾಡಿದ ಅವರು, ಕ್ರಿಯಾಶೀಲ ಮನೋಭಾವ ಹೊಂದಿರುವವರನ್ನು ವಿವಿಧ ಸಮಿತಿಗಳ ಜವಾಬ್ದಾರಿ ಹಂಚಿಕೆ ಮಾಡುವುದು ಉತ್ತಮ.
ಶತಮಾನೋತ್ಸವ ಆಚರಣೆಗೆ ಆರ್ಥಿಕ ಕ್ರೋಡೀಕರಣದ ಬಲ ಹೆಚ್ಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಈ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳ ಸಹಕಾರ ಬಹು ಅಗತ್ಯವಾಗಿದೆ. ಈ ಶಾಲೆಯಲ್ಲಿ ಓದಿದ ಪ್ರತಿಯೊಬ್ಬ ವಿದ್ಯಾರ್ಥಿಯು ಸಹಕಾರದ ಮನೋಭಾವವನ್ನು ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.
ಈ ಶಾಲೆಯ ನಿರ್ಮಾಣದ ಹಿಂದಿರುವ ತ್ಯಾಗವನ್ನು, ಜ್ಞಾನಾರ್ಜನೆಯಿಂದ ಉದ್ಧಾರಗೊಂಡವರನ್ನು ಗುರುತಿಸುವ ಕಾರ್ಯ ನಡೆಬೇಕಾಗಿದೆ. ಆ ಮೂಲಕ ಮುಂದಿನ ಪೀಳಿಗೆಗೆ ಈ ಶಾಲೆಯ ಗುಣಗಳನ್ನು, ಹೆಜ್ಜೆಯ ಗುರುತುಗಳನ್ನು ತಿಳಿಸುವ ಕಾರ್ಯ ಈ ಆಚರಣೆಯಿಂದ ನಡೆಯಬೇಕಾಗಿದೆ ಎಂದು ತಿಳಿಸಿದರು.
ಶತಮಾನೋತ್ಸವ ಆಚರಣೆಯನ್ನು ವಿಭಿನ್ನತೆಯಿಂದ ಆಚರಿಸುವ ಮೂಲಕ ಮಾದರಿ ಕಾರ್ಯಕ್ರಮವಾಗಿ ರೂಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರುಗಳ ಒಗ್ಗಟ್ಟಿನ ಬಲ ಪ್ರದರ್ಶಿಸಬೇಕಾಗಿದೆ ಎಂದು ಸಭೆಗೆ ತಿಳಿಸಿದರು.
ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಈ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ತರಗತಿ ಪ್ರಾರಂಭಕ್ಕೆ ಮತ್ತು ಭವನ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಆರ್ಥಿಕ ಕ್ರೋಢೀಕರಣಕ್ಕೆ ಶ್ರಮಿಸಲಾಗುತ್ತಿದ್ದು, ಸಂಘ-ಸAಸ್ಥೆಗಳು ಮತ್ತು ಹಳೆ ವಿದ್ಯಾರ್ಥಿಗಳ ಬೆಂಬಲವನ್ನು ಬಯಸಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ. ಕುಮಾರ್ ಸಭೆಗೆ ಮಾಹಿತಿ ನೀಡಿದರು.
ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಬಿ.ಎನ್. ಪ್ರಕಾಶ್, ಸಂಜೀವ್, ಪ್ರಮೋದ್ ಕಾಮತ್, ಉತ್ತಪ್ಪ, ಟಿ.ಎಲ್. ಶ್ರೀನಿವಾಸ್, ಪ್ರಭಾಕರ್ ನೆಲ್ಲಿತ್ತಾಯ ಈ ಶಾಲೆಯ ಬೆಳೆದುಬಂದ ಹಾದಿಯ ಬಗ್ಗೆ ವಿವರಿಸಿದರು.
ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಉಪಸ್ಥಿತಿಯಲ್ಲಿ, ಜಿಲ್ಲಾ ಶಿಕ್ಷಣಾಧಿಕಾರಿ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರವಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಶಾಂತಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಹಳೆಯ ವಿದ್ಯಾರ್ಥಿ ಸಂಘದ ಸದಸ್ಯ ಕಾಡ್ಯಮಾಡ ಗಿರೀಶ್ ಗಣಪತಿ ಸೇರಿದಂತೆ ಶಾಲೆಯ ಶಿಕ್ಷಕರು ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಸತೀಶ್ ಸ್ವಾಗತಿಸಿ, ವಂದಿಸಿದರು.