ಸುಂಟಿಕೊಪ್ಪ, ಸೆ. ೨೧: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಸಭೆ ಸಮಿತಿ ಅಧ್ಯಕ್ಷ ಅಬ್ದುಲ್ ರಜಾಕ್ ಅಧ್ಯಕ್ಷತೆ ಯಲ್ಲಿ ನಡೆಸಲಾಯಿತು.
ಕುಶಾಲನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅಬ್ದುಲ್ ರಜಾಕ್, ನೂತನ ಸಮಿತಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನುಡಿದರು. ಮುಂದಿನ ದಿನಗಳಲ್ಲಿ ಸಭೆಯೊಂದನ್ನು ಏರ್ಪಡಿಸುವ ಮೂಲಕ ಶಾಸಕರ ಹಾಗೂ ಬ್ಲಾಕ್ ಅಧ್ಯಕ್ಷರ ಸಮ್ಮುಖದಲ್ಲಿ ನೂತನವಾಗಿ ಆಯ್ಕೆಗೊಳಿಸಲಾಗಿರುವ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಗುವುದು ಎಂದರು.
ಬ್ಲಾಕ್ ಸಭೆಯನ್ನುದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷ ಪಿ.ಎ. ಹನೀಫ್ ಮಾತನಾಡಿ, ನೂತನವಾಗಿ ಆಯ್ಕೆಯಾಗಿರುವ ಸದಸ್ಯರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು ಹಾಗೆಯೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದರು.
ಇದೇ ಸಂದರ್ಭ ಪ್ರಧಾನ ಕಾರ್ಯದರ್ಶಿ ಸಯ್ಯದ್ ಭಾವ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತಪ್ಪನ್ ಅವರುಗಳು ಮಾತನಾಡಿದರು.
ಸಭೆಯಲ್ಲಿ ನೂತನವಾಗಿ ಸಮಿತಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳು ಪಾಲ್ಗೊಂಡಿದ್ದರು.