ವರದಿ : ಚಂದ್ರಮೋಹನ್
ಕುಶಾಲನಗರ, ಸೆ. ೨೨: ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಎರಡನೇ ಅವಧಿ ಚುನಾವಣೆ ಪ್ರಕ್ರಿಯೆ ತಾ.೨೫ ಕ್ಕೆ ನಿಗದಿಯಾಗಿದ್ದು, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಎಂ ಎಸ್ ಶಿವಾನಂದ್ ಅವರು ಕುಶಾಲನಗರ ಪುರಸಭೆಗೆ ತಕ್ಷಣ ಚುನಾವಣೆ ನಡೆಸುವಂತೆ ಹಾಗೂ ಪಟ್ಟಣ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಮತ್ತೆ ರಾಜ್ಯ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಇತ್ತೀಚೆಗಷ್ಟೇ ನಡೆಯಬೇಕಾಗಿದ್ದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಬಗ್ಗೆ ಎಂ ಎಸ್ ಶಿವಾನಂದ ಅವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಪೆಟಿಷನ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆ ಮುಂದೂಡಲ್ಪಟ್ಟಿತ್ತು.
ಕುಶಾಲನಗರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ್ದ ಸರ್ಕಾರ ಪುರಸಭೆಗೆ ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪೂರ್ಣ ಪ್ರದೇಶ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಯ ಭಾಗಶಃ ಮಾದಾಪಟ್ಟಣ ವ್ಯಾಪ್ತಿಯ ಪ್ರದೇಶಗಳನ್ನು ಒಳಗೊಂಡAತೆ ಸೇರ್ಪಡೆಗೊಳಿಸಿ ಆದೇಶ ಹೊರಡಿಸಿತ್ತು.
ಆದರೆ ಕುಶಾಲನಗರ ಪಟ್ಟಣ ಪಂಚಾಯಿತಿ ಕೇವಲ ನಾಮಫಲಕದಲ್ಲಿ ಮಾತ್ರ ಮೇಲ್ದರ್ಜೆಗೆ ಏರಿದೆಯೇ ಹೊರತು ಇನ್ನು ಯಾವುದೇ ರೀತಿಯಲ್ಲಿ ಮೇಲ್ದರ್ಜೆಗೆ ಏರಿಲ್ಲ ಎನ್ನುವ ಆರೋಪಗಳು ನಿರಂತರವಾಗಿ ಕೇಳಿ ಬರುತ್ತಿವೆ.
ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ೨೩ ಸದಸ್ಯರ ಅಧಿಕಾರ ಅವಧಿ ಈ ಪುರಸಭೆ ಹೆಸರಿನಲ್ಲಿ ರದ್ದುಗೊಳ್ಳುವ ಪರಿಸ್ಥಿತಿ ಉಂಟಾಗಿ ಇದೀಗ ಅತಂತ್ರರಾಗಿರುವ ಅಲ್ಲಿನ ಜನಪ್ರತಿನಿಧಿಗಳು ಕುಶಾಲನಗರ ಪುರಸಭೆಗೆ ತಕ್ಷಣ ಚುನಾವಣೆ ನಡೆಸಿ ಎನ್ನುವ ಒತ್ತಾಯ ಹೇರುತ್ತಿದ್ದಾರೆ.
ಕುಶಾಲನಗರ ಪಟ್ಟಣ ಪಂಚಾಯಿತಿಗೆ ಆಯ್ಕೆಯಾಗಿರುವ ಜನಪ್ರತಿನಿಧಿಗಳು ತಕ್ಷಣ ರಾಜೀನಾಮೆ ನೀಡಿ ಪುರಸಭೆ ಚುನಾವಣೆಗೆ ಅವಕಾಶ ಕಲ್ಪಿಸಬೇಕು ಎನ್ನುವುದು ಅವರ ಆಗ್ರಹವಾಗಿದೆ.
ಇವೆಲ್ಲದರ ನಡುವೆ ಕುಶಾಲನಗರ ಪಟ್ಟಣ ಸೇರಿದಂತೆ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಕೆಲಸ ಸಂಪೂರ್ಣ ಸ್ಥಗಿತಗೊಂಡಿದೆ ಎನ್ನುವ ಆರೋಪಗಳು ಕೂಡ ಕೇಳಿ ಬರುತ್ತಿವೆ.
ಕುಶಾಲನಗರ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿಗೆ ೧೬ ಮಂದಿ ಸದಸ್ಯರು ಒಳಗೊಂಡಿದ್ದು, ಪುರಸಭೆಯಾಗಿ ಮೇಲ್ದರ್ಜೆಗೆ ಏರಿದ್ದರೂ ಅವರುಗಳು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಪ್ರಯತ್ನಿಸುತ್ತಿರುವುದು ಸರಿಯಲ್ಲ ಎನ್ನುವುದು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ.
ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೆ ಏರಿ ಪುರಸಭೆ ಆಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಇರುವ ಪಟ್ಟಣ ಪಂಚಾಯಿತಿ ಸದಸ್ಯರುಗಳು ರಾಜೀನಾಮೆ ನೀಡಿ ಮುಂದಿನ ಪುರಸಭೆಗೆ ಚುನಾವಣೆಗೆ ಅವಕಾಶ ಕಲ್ಪಿಸಬೇಕು ಎನ್ನುವುದು ಸ್ಥಳೀಯ ನಾಗರೀಕರ ಆಗ್ರಹ ಕೂಡ ಆಗಿದೆ.
ಕುಶಾಲನಗರ ಪುರಸಭೆ ಸಂಬAಧ ೨೩ ವಾರ್ಡ್ಗಳ ಪುನರ್ ರಚನೆ ಬಗ್ಗೆ ಈಗಾಗಲೇ ಸರಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಸಕ್ತ ಪರಿಸ್ಥಿತಿಯಲ್ಲಿ ಪುರಸಭೆ ಚುನಾವಣೆ ತನಕ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ೨೩ ಸದಸ್ಯರುಗಳಿಗೆ ಕೂಡ ಕುಶಾಲನಗರ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿಗೆ ನಾಮನಿರ್ದೇಶನ ನೀಡುವ ಅವಕಾಶ ಕಲ್ಪಿಸುವ ಮೂಲಕ ತಾತ್ಕಾಲಿಕ ಆಡಳಿತ ನಡೆಸುವುದು ಒಳಿತು ಎನ್ನುವುದು ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಅವರ ಪ್ರತಿಕ್ರಿಯೆಯಾಗಿದೆ.
ಈಗಾಗಲೇ ಮುಳ್ಳುಸೋಗೆ ಭಾಗದಿಂದ ಒಟ್ಟು ಏಳು ಮಂದಿಯನ್ನು ಕುಶಾಲನಗರ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿದ್ದು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿಗೆ ಈ ಮೂಲಕ ಒತ್ತು ನೀಡಲಾಗಿದೆ ಎನ್ನುವುದು ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಅವರ ಅಭಿಪ್ರಾಯವಾಗಿದೆ.
ಒಟ್ಟಾರೆ ಅಧಿಕಾರ ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿರುವ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಪ್ರತಿನಿಧಿಗಳು ಕಳೆದ ಎರಡು ವರ್ಷಗಳಿಂದ ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದು ತಕ್ಷಣ ಪುರಸಭೆಯ ಚುನಾವಣೆ ಪ್ರಕ್ರಿಯೆಗೆ ಕಾದು ಕುಳಿತಿದ್ದಾರೆ.
ಇದೀಗ ಹೈಕೋರ್ಟ್ ಅಂಗಳದಲ್ಲಿರುವ ಪ್ರಸಕ್ತ ಚುನಾವಣಾ ಪ್ರಕ್ರಿಯೆಯ ಬಗ್ಗೆ ತಾ.೨೩ರಂದು (ಇಂದು) ತೀರ್ಪು ಹೊರ ಬೀಳುವ ಸಾಧ್ಯತೆ ಇದ್ದು ಮುಂದಿನ ಬೆಳವಣಿಗೆ ಕಾದು ನೋಡಬೇಕಾಗಿದೆ.